ಉತ್ತರಪ್ರದೇಶ ವಿಧಾನಸಭೆ ಚುನಾವಣೆ: ಮುಸ್ಲಿಮ್ ಬಾಹುಳ್ಯ ಕ್ಷೇತ್ರಗಳಲ್ಲಿ ಝಮೀರ್ ಅಹ್ಮದ್ ಪ್ರಚಾರ?

Update: 2021-10-13 13:53 GMT

ಬೆಂಗಳೂರು, ಅ.13: ಮುಂಬರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸದುದ್ದೀನ್ ಉವೈಸಿ ನೇತೃತ್ವದ ಆಲ್ ಇಂಡಿಯಾ ಮಜ್ಲಿಸೆ ಇತ್ತೇಹಾದುಲ್ ಮುಸ್ಲಿಮೀನ್ 100 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿರುವ ಬೆನ್ನಲ್ಲೆ, ಕಾಂಗ್ರೆಸ್ ಪಕ್ಷವು ಮುಸ್ಲಿಮ್ ಬಾಹುಳ್ಯ ಕ್ಷೇತ್ರಗಳಲ್ಲಿ ಚಾಮರಾಜಪೇಟೆ ಕ್ಷೇತ್ರದ ಶಾಸಕ ಝಮೀರ್ ಅಹ್ಮದ್ ಖಾನ್ ಅವರನ್ನು ಚುನಾವಣೆಯ ಸ್ಟಾರ್ ಪ್ರಚಾರಕರನ್ನಾಗಿ ಬಳಸಿಕೊಳ್ಳಲು ಮುಂದಾಗಿದೆ.

ಈ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಉತ್ತರಪ್ರದೇಶ ಕಾಂಗ್ರೆಸ್ ಸಮಿತಿಯ ಉಸ್ತುವಾರಿಯೂ ಆಗಿರುವ ಪ್ರಿಯಾಂಕಾ ಗಾಂಧಿ ದೂರವಾಣಿ ಮೂಲಕ ಝಮೀರ್ ಅಹ್ಮದ್ ಖಾನ್ ಅವರನ್ನು ಸಂಪರ್ಕಿಸಿ ಈ ವಿಚಾರದ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದು ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.

ಇದೀಗ ಕಳೆದ ಒಂದು ವಾರದಿಂದ ಹೊಸದಿಲ್ಲಿಯಲ್ಲಿರುವ ಝಮೀರ್ ಅಹ್ಮದ್ ಖಾನ್, ಎಐಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಮ್ರಾನ್ ಪತ್ರಾಪ್‍ಗಡಿ ಅವರೊಂದಿಗೆ ಚರ್ಚೆ ನಡೆಸಿದ್ದು, ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಮ್ಮತಿಸಿದ್ದಾರೆ. ರಾಜ್ಯದಿಂದ ಸಿ.ಎಂ.ಇಬ್ರಾಹಿಮ್ ಹಾಗೂ ಝಮೀರ್ ಅಹ್ಮದ್ ಖಾನ್ ಅವರನ್ನು ಚುನಾವಣಾ ಪ್ರಚಾರಕ್ಕಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ಬಯಸಿತ್ತು.

ಆದರೆ, ಸಿ.ಎಂ.ಇಬ್ರಾಹಿಮ್ ಈಗಾಗಲೆ ಪಕ್ಷದಿಂದ ಒಂದು ಹೆಜ್ಜೆ ಹೊರಗಿಟ್ಟಿರುವ ಹಿನ್ನೆಲೆಯಲ್ಲಿ ಝಮೀರ್ ಅಹ್ಮದ್ ಖಾನ್ ಅವರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸುವಂತೆ ಪ್ರಿಯಾಂಕಾ ಗಾಂಧಿ, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೂ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಉತ್ತರಪ್ರದೇಶದಲ್ಲಿ ಅಸದುದ್ದೀನ್ ಉವೈಸಿ ಪಕ್ಷವು 100 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವುದರಿಂದ ಅಲ್ಪಸಂಖ್ಯಾತರ ಮತಗಳು ವಿಭಜನೆಯಾಗಿ ಬಿಜೆಪಿಗೆ ಅನುಕೂಲವಾಗುತ್ತದೆ. ಆದುದರಿಂದ, ಸಮುದಾಯದಲ್ಲಿ ಪ್ರಭಾವಿಯಾಗಿ ಗುರುತಿಸಿಕೊಂಡಿರುವ ನಾಯಕರನ್ನು ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿಸುವುದು ಕಾಂಗ್ರೆಸ್ ಹೈಕಮಾಂಡ್ ಉದ್ದೇಶವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News