×
Ad

''ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಇದೇನಾ'': ಕಾಂಗ್ರೆಸ್ ನಾಯಕರಿಗೆ ಕುಮಾರಸ್ವಾಮಿ ಪ್ರಶ್ನೆ

Update: 2021-10-16 10:17 IST

ಬೆಂಗಳೂರು: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಗಳನ್ನು ಮಾಡಿ ಕಾಂಗ್ರೆಸ್ ನಾಯಕರಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. 

ಕುಮಾರಸ್ವಾಮಿ ಅವರ ಟ್ವೀಟ್ ಹೀಗಿದೆ...

''ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಇದೇನಾ ಸಿದ್ದಹಸ್ತರೇ? ತೊಟ್ಟಿಲನ್ನೂ ತೂಗುತ್ತಾ, ಮಗುವನ್ನೂ ಚಿವುಟುತ್ತಾ, ಸಾಧ್ಯವಾದರೆ ಆ ಮಗುವಿನ ಕತ್ತನ್ನೂ ಕುಯ್ಯುತ್ತಾ ನಡೆಸುತ್ತಿರುವ ಇಂಥ ನೀಚ ರಾಜರಾರಣ ಮುಸ್ಲಿಂ ಬಾಂಧವರಿಗೆ ಈಗ ಗೊತ್ತಾಗಿಬಿಟ್ಟಿದೆ''.

''ಈಗ ಆಡಿಯೋ ನೆಪದಲ್ಲಿ ಸಲೀಂ ಮೊಹಮದ್ ಬಲಿ ಪಡೆದಾಗಿದೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಟ್ಟು ದೊಡ್ಡವರ ರಕ್ಷಣೆ ಮಾಡಲಾಗಿದೆ. ಸಲೀಂ ಹೇಳಿದ್ದೆಲ್ಲವನ್ನೂ ಕೇಳಿಕೊಂಡು ʼರಸಸ್ವಾದʼ ಮಾಡಿ ಪುಕ್ಕಟೆ ಮನರಂಜನೆ ಪಡೆದ ವ್ಯಕ್ತಿಗೆ ರಕ್ಷಣೆ ನೀಡಿ ಓರ್ವ ಅಲ್ಪಸಂಖ್ಯಾತ ನಾಯಕನನ್ನು 6 ವರ್ಷ ಉಚ್ಚಾಟಿಸಲಾಗಿದೆ. ಇದು ಯಾವ ಸೀಮೆ ನ್ಯಾಯ?''

''ಮೈಸೂರಿನ ಹಿರಿಯ ನಾಯಕ ತನ್ವೀರ್ ಸೇಠ್ ಅವರನ್ನು ಅಪಮಾನಕರವಾಗಿ ನಡೆಸಿಕೊಂಡಿದ್ದು ಇದೇ ಸಿದ್ದಹಸ್ತರು. ಅಲ್ಲಿನ ಪಾಲಿಕೆಯಲ್ಲಿ ಜಾತ್ಯತೀತ ಶಕ್ತಿಗಳನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಿದ ತನ್ವೀರ್ ಮೇಲೆ ಕೂಗಾಡಿದ ಸಿದ್ದಸೂತ್ರ ಪ್ರವೀಣರು, ಇನ್ನಿಲ್ಲದ ಅಪಮಾನ ಮಾಡಿ ನಿಂದಿಸುತ್ತಾರೆ''.

''ಕಳೆದ ಲೋಕಸಭೆ ಚುನಾವಣೆ ನಂತರ ತಮಗೆ ಆಗುತ್ತಿರುವ ಅನ್ಯಾಯ ಪ್ರಶ್ನಿಸಿದ ರೋಷನ್ ಬೇಗ್‌ʼಗೆ ಶೋಕಾಸ್ ನೊಟೀಸ್ ನೀಡಿ, ತಮ್ಮನ್ನು ಬಹಿರಂಗವಾಗಿ ಪ್ರಶ್ನಿಸಿದರು ಎಂಬ ಕಾರಣಕ್ಕೆ ಅವರನ್ನು ಬೇಕಾಬಿಟ್ಟಿ ನಡೆಸಿಕೊಂಡು ಅಪಮಾನ ಮಾಡುತ್ತಾರೆ ಸಿದ್ದಹಸ್ತರು. ಕೊನೆಗೆ ರೋಷನ್ ಬೇಗ್ ಕಾಂಗ್ರೆಸ್ ಪಕ್ಷದಿಂದಲೇ ದೂರವಾಗುತ್ತಾರೆ''.

''ಆಗ ಭೈರತಿ ಸುರೇಶ್ ಪರ ಲಾಬಿ ಮಾಡಿದ್ದ ಸಿದ್ಧಕಲೆ ಸೂತ್ರಧಾರರು, ಅವರನ್ನೇ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಿ ಒಳಸುಳಿ ಸೃಷ್ಟಿಸಿ ಷರೀಫರ ಮೊಮ್ಮಗನನ್ನು ಸೋಲಿಸುತ್ತಾರೆ! 2023ರ ಚುನಾವಣೆಯಲ್ಲಿ ಭೈರತಿ ಸುರೇಶ್ʼಗೇ ಹೆಬ್ಬಾಳದ ಕಾಂಗ್ರೆಸ್ ಟಿಕೆಟ್ ಗ್ಯಾರಂಟಿ. ಹಾಗಾದರೆ ಜಾಫರ್ ಷರೀಫರ ಮೊಮ್ಮಗನ ಕಥೆ ಏನು?''

''ಈ ʼಸಿದ್ದಹಸ್ತರ ಸಿದ್ದಸೂತ್ರʼ ಅಲ್ಲಿಗೇ ನಿಲ್ಲುವುದಿಲ್ಲ. 2016ರಲ್ಲಿ ಹೆಬ್ಬಾಳ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹಿರಿಯ ನಾಯಕ ಸಿ.ಕೆ.ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್ ಅವರಿಗೆ ಅಧಿಕೃತ ಟಿಕೆಟ್ ಕೊಡುತ್ತದೆ''. 

''2012ರ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಇಕ್ಬಾಲ್ ಅಹಮದ್ ಸರಡಗಿ ಸೋಲುತ್ತಾರೆ. ಪಕ್ಷೇತರ ಅಭ್ಯರ್ಥಿಯಾಗಿದ್ದ ಭೈರತಿ ಸುರೇಶ್ ತಮ್ಮ ಗೆಲುವಿಗೆ ಬೇಕಿದ್ದ 19 ಮತ ಮೀರಿ 23 ಮತ ಪಡೆದು ಗೆಲ್ಲುತ್ತಾರೆ!! ಇಲ್ಲಿ ಸರಡಗಿ ಸೋಲಿಗೆ, ಬೈರತಿ ಸುರೇಶ್ ಗೆಲುವಿಗೆ ಕಾರಣವಾದ ʼಸಿದ್ದಸೂತ್ರʼ ಹಣೆದಿದ್ದು ಯಾರು?'' ಎಂದು ಕಾಂಗ್ರೆಸ್ ನಾಯಕರನ್ನು ಪ್ರಶ್ನಸಿದ್ದಾರೆ. 

''ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ ʼಸಿದ್ದಹಸ್ತʼ ಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ಅಹರ್ನಿಷಿ ದುಡಿದ #ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ'' ಎಂದು ವಾಗ್ದಾಳಿ ನಡೆಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News