ನಗರದಲ್ಲಿ ರಸ್ತೆಗುಂಡಿ: ಗುಣಮಟ್ಟ ಕಾಯ್ದುಕೊಳ್ಳುವಂತೆ ಪಾಲಿಕೆಗೆ ಹೈಕೋರ್ಟ್ ತಾಕೀತು

Update: 2021-10-16 18:53 GMT

ಬೆಂಗಳೂರು, ಅ.16: ರಸ್ತೆಗುಂಡಿಗಳನ್ನು ಮುಚ್ಚುವ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಬಿಬಿಎಂಪಿಗೆ ಹೈಕೋರ್ಟ್ ತಾಕೀತು ಮಾಡಿದೆ.

ಬೆಂಗಳೂರಿನ ರಸ್ತೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.

ಬಿಬಿಎಂಪಿ ಗುಂಡಿ ಮುಚ್ಚಿದ್ದ ರಸ್ತೆಗಳಲ್ಲಿ ಎರಡು-ಮೂರು ತಿಂಗಳಲ್ಲೇ ಮತ್ತೆ ಗುಂಡಿಗಳು ಕಾಣಿಸಿಕೊಂಡಿವೆ. ಕೇವಲ ಸಚಿವರ ಮನೆಗಳ ಮುಂದಿನ ರಸ್ತೆ ಉತ್ತಮವಾಗಿದ್ದರೆ ಸಾಲದು, ಸಾಮಾನ್ಯ ಜನರ ಮನೆಗಳ ಬಳಿಯೂ ರಸ್ತೆಗಳು ಉತ್ತಮ ಸ್ಥಿತಿಯಲ್ಲಿರಬೇಕು ಎಂದು ಪಾಲಿಕೆಗೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಸಂದರ್ಭದಲ್ಲಿ ಬಿಬಿಎಂಪಿ ವಕೀಲರು, ನಗರದಾದ್ಯಂತ ಪ್ರತಿದಿನ ಗುಂಡಿ ಮುಚ್ಚುತ್ತಿದ್ದೇವೆ ಎಂದು ಮಾಹಿತಿ ನೀಡಿದರು.
ಬಳಿಕ ಪೀಠವೂ, ನಗರದ ಎಲ್ಲ ರಸ್ತೆಗಳಲ್ಲಿನ ಗುಂಡಿಗಳನ್ನೂ ಮುಚ್ಚಬೇಕು ಹಾಗೂ ಗುಂಡಿ ಮುಚ್ಚುವ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ನಿರ್ದೇಶಿಸಿತು. ಆನಂತರ, ಕಾಮಗಾರಿಗೆ ಸಂಬಂಧಿಸಿದ ವಸ್ತುಸ್ಥಿತಿ ವರದಿಯನ್ನು 2 ವಾರಗಳಲ್ಲಿ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ನ.11ಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News