ಇಂಧನ ಬೆಲೆ ಏರಿಕೆ ಖಂಡಿಸಿ ಅನಿರ್ದಿಷ್ಟಾವಧಿ ಮುಷ್ಕರ; ಲಾರಿ ಮಾಲಕರ ಎಚ್ಚರಿಕೆ

Update: 2021-10-17 17:36 GMT
ಫೈಲ್ ಚಿತ್ರ

ಬೆಂಗಳೂರು, ಅ.17: ದಿನೇ ದಿನೇ ಕೇಂದ್ರ ಸರಕಾರ ಇಂಧನ ಬೆಲೆ ಏರಿಕೆ ಮಾಡುತ್ತಿರುವ ಕ್ರಮ ಖಂಡಿಸಿ ಲಾರಿ ಮಾಲಕರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲು ತೀರ್ಮಾನಿಸಿದ್ದಾರೆ.

ರವಿವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಫೆಡರೇಷನ್ ಆಫ್ ಕರ್ನಾಟಕ ಸ್ಟೇಟ್ ಲಾರಿ ಓನರ್ಸ್ ಮತ್ತು ಏಜೆಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಷಣ್ಮುಗಪ್ಪ, ಇಂಧನ ಬೆಲೆ ಏರಿಕೆ ಸಂಬಂಧ ಲಾರಿ ಸಂಘಟನೆಗಳೊಂದಿಗೆ ತುರ್ತು ಸಭೆ ನಡೆಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿ ಸರಕಾರದ ಮೇಲೆ ಒತ್ತಡ ತರಲಾಗುವುದು ಎಂದರು.

ಮುಖ್ಯವಾಗಿ ಡೀಸೆಲ್ ದರ 100ರ ಗಡಿ ದಾಟಿದ್ದು, ಸರಕು-ಸಾಗಾಣಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಲಾರಿ ಮಾಲಕರ ಬದುಕು ದುಸ್ತರವಾಗುತ್ತಿದೆ. ಬರುವ ಆದಾಯವನ್ನೆಲ್ಲ ಡೀಸೆಲ್ ಮತ್ತು ಟೋಲ್‍ಗೆ ಕಟ್ಟಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಡೀಸೆಲ್ ಮೇಲಿನ ತೆರಿಗೆ ಇಳಿಸಬೇಕೆಂದು ಹಲವಾರು ಬಾರಿ ಮನವಿ ಮಾಡಿದರೂ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ನಾವು ಮುಷ್ಕರ ನಡೆಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News