ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಅಲಂಕಾರ, ಪೂಜೆ ಮಾಡಿ ವಿನೂತನ ಪ್ರತಿಭಟನೆ

Update: 2021-10-20 12:15 GMT
photo: twitter

ಬೆಂಗಳೂರು, ಅ.20: ನಗರದಲ್ಲಿ ಹೆಚ್ಚಾಗಿರುವ ರಸ್ತೆ ಗುಂಡಿಗಳ ವಿರುದ್ಧ ಆಕ್ರೋಶ ಹೊರಹಾಕಿದ ಆಮ್ ಆದ್ಮಿ ಪಕ್ಷದ ಸದಸ್ಯರು, ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಬುಧವಾರ ನಗರದ ರಸ್ತೆಗುಂಡಿಗಳಿಗೆ ಸುತ್ತ ರಂಗೋಲಿ ಹಾಕಿ, ಹೂವಿನಿಂದ ಅಲಂಕರಿಸಿ, ಆರತಿ ಎತ್ತಿ ಪೂಜೆ ನೆರವೇರಿಸಿ ಸರಕಾರದ ವಿರುದ್ಧ ಆಮ್ ಆದ್ಮಿ ಪಕ್ಷದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ, ಬೆಂಗಳೂರಿನ ರಸ್ತೆಗಳ ದುರಸ್ತಿಗೆ ಕಳೆದ ಐದು ವರ್ಷಗಳಲ್ಲಿ ಬರೋಬ್ಬರಿ 20,060 ಕೋಟಿ ರೂಪಾಯಿಯನ್ನು ರಾಜ್ಯ ಸರಕಾರ ಖರ್ಚು ಮಾಡಿದೆ. ಆದರೆ ಇಲ್ಲಿನ ರಸ್ತೆಗಳು ಮಾತ್ರ ಶೋಚನೀಯ ಸ್ಥಿತಿಯಲ್ಲಿವೆ ಎಂದರು.

ಗುಂಡಿಗಳಿಂದಾಗಿ ಅಪಘಾತಗಳು, ಸಾವುಗಳು ಸಾಮಾನ್ಯವಾಗಿದೆ. ಸರಕಾರ ಬಿಡುಗಡೆ ಮಾಡಿದ ಹಣವು ಯಾರ ಜೇಬು ಸೇರಿದೆ ಎಂಬ ಬಗ್ಗೆ ಸಮಗ್ರ ತನಿಖೆಯಾಗಬೇಕು. ರಸ್ತೆ ಅಭಿವೃದ್ಧಿ ಯೋಜನೆಗಳ ಅನುದಾನದ ಕುರಿತು ಸರಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.

ಅಪ್ ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರವು ವಾಹನ ಸವಾರರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ಒಂದೆಡೆ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಿಸಿ ವಾಹನ ಸವಾರರನ್ನು ಹೈರಾಣಾಗಿಸಿದೆ. 

ಮತ್ತೊಂದೆಡೆ, ರಸ್ತೆಗಳಿಗೆ ವಿನಿಯೋಗವಾಗಬೇಕಿದ್ದ ಹಣವನ್ನು ಜೇಬಿಗೆ ಇಳಿಸಿಕೊಂಡು ಶಾಸಕರು ಹಾಗೂ ಸಚಿವರು ಗುಂಡಿಗಳಿಗೆ ಕಾರಣವಾಗಿದ್ದಾರೆ. ಕಾಟಾಚಾರಕ್ಕೆ ಗುಂಡಿಗಳಿಗೆ ತೇಪೆ ಹಾಕಲಾಗುತ್ತಿದ್ದು, ಸಣ್ಣ ಮಳೆಗೂ ಅವು ಕಿತ್ತು ಹೋಗುತ್ತಿವೆ ಎಂದು ವಾಗ್ದಾಳಿ ನಡೆಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News