ಏಕ ಬಳಕೆ ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ: ಮನಪಾ ಆಯುಕ್ತ

Update: 2021-10-21 17:02 GMT

ಮಂಗಳೂರು, ಅ.21: ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸುವಂತೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ ಶ್ರೀಧರ್ ಮನವಿ ಮಾಡಿದ್ದಾರೆ.

ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಂಗಳೂರು ಪ್ರಾದೇಶಿಕ ಕಚೇರಿ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಮಂಗಳೂರು ವಿಶೇಷ ಆರ್ಥಿಕ ವಲಯ ಸಂಯುಕ್ತಾಶ್ರಯದಲ್ಲಿ ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆಯ ನಿಷೇಧ ಕುರಿತಂತೆ ಮಂಗಳೂರು ವಿಶೇಷ ಆರ್ಥಿಕ ವಲಯದ ಕಚೇರಿಯಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಏಕ ಬಳಕೆಯ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಯಲ್ಲಿ ಸಾಕಷ್ಟು ಸಮಸ್ಯೆಗಳು ಉದ್ಬವಿಸುತ್ತಿವೆ. ಆ ಪ್ಲಾಸ್ಟಿಕ್ ಪರಿಸರಕ್ಕೆ ಅತ್ಯಂತ ಮಾರಕವಾಗುತ್ತಿದೆ. ಜನರೇ ಜಾಗೃತರಾಗಿ ಅಂತಹ ಪ್ಲಾಸ್ಟಿಕ್ ವಸ್ತುಗಳ ಬಳಕಯನ್ನು ಸ್ವಯಂ ಪ್ರೇರಿತರಾಗಿ ನಿಲ್ಲಿಸುವಂತೆ ಅವರು ಕೋರಿದರು.

ಕೇಂದ್ರದ ಮಾಲಿನ್ಯ ನಿಯಂತ್ರಣ ಮಂಡಳಿಯ ವಿಜ್ಞಾನಿ ಪಿ.ಕೆ. ಸೆಲ್ವಿ ಮಾತನಾಡಿ, ಏಕಬಳಕೆಯ ಪ್ಲಾಸ್ಟಿಕ್ ಉತ್ಪಾದನೆ, ಬಳಕೆ ಹಾಗೂ ಸಂಗ್ರಹಣೆ ಪ್ರಸ್ತುತ ಸ್ಥಿತಿಗತಿ ಹಾಗೂ ಕೇಂದ್ರ ಸರಕಾರ ನೂತನವಾಗಿ ಜಾರಿಗೊಳಿಸಿದ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಕಾಯ್ದೆಯ ಕುರಿತು ಮಾಹಿತಿ ನೀಡಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಅಧಿಕಾರಿ ಕೀರ್ತಿಕುಮಾರ್ ಹಾಗೂ ಮಂಗಳೂರು ವಿಶೇಷ ಆರ್ಥಿಕ ವಲಯದ ಕಾರ್ಯ ನಿರ್ವಹಣಾಧಿಕಾರಿ ಪಿ.ಸೂರ್ಯ ನಾರಾಯಣ ಮಾತನಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News