2ನೇ ಡೋಸ್ ಲಸಿಕೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲು ದ.ಕ. ಡಿಸಿ ಸೂಚನೆ

Update: 2021-10-21 17:04 GMT

ಮಂಗಳೂರು, ಅ.21: ದೇಶದಲ್ಲಿ ಕೋವಿಡ್-19 ಸೋಂಕಿನ 100 ಕೋಟಿ ಲಸಿಕೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇದೇ ಅ.22ರಂದು ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ಲಸಿಕಾ ಮೇಳದಲ್ಲಿ 2ನೇ ಡೋಸ್‌ಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಜಿಲ್ಲಾ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಕೋವಿಡ್-19 ಲಸಿಕಾ ಪ್ರಗತಿಗೆ ಸಂಬಂಧಿಸಿದ ಸಭೆಯಲ್ಲಿ ಅವರು ಮಾತನಾಡಿದರು. ಅ.22ರಂದು ದಕ್ಷಿಣಕನ್ನಡ ಜಿಲ್ಲೆಗೆ ಕೋವಿಡ್‌ನ ಒಟ್ಟು 1,20,000 ಲಸಿಕಾಕರಣ ಗುರಿ ನೀಡಲಾಗಿದೆ. ಎರಡನೇ ಡೋಸ್ ಪಡೆಯುವವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಬೇಕು. 18 ವರ್ಷಕ್ಕಿಂತ ಮೇಲ್ಪಟ್ಟಿರುವ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಲಸಿಕೆ ನೀಡುವ ಮೂಲಕ ಈ ಲಸಿಕಾ ಮೇಳವನ್ನು ಯಶಸ್ವಿಯಾಗಿಸಬೇಕು ಎಂದು ಅವರು ಸೂಚಿಸಿದರು.

ಮಂಗಳೂರಿಗೆ 65 ಸಾವಿರದಿಂದ 67 ಸಾವಿರ, ಬಂಟ್ವಾಳ ತಾಲೂಕಿಗೆ 15 ಸಾವಿರ, ಬೆಳ್ತಂಗಡಿ ತಾಲೂಕಿಗೆ 18 ಸಾವಿರ, ಪುತ್ತೂರು ತಾಲೂಕಿಗೆ 14 ಸಾವಿರ, ಸುಳ್ಯ ತಾಲೂಕಿಗೆ 6,000ದಂತೆ ಲಸಿಕಾ ಮೇಳದ ಗುರಿ ನಿಗದಿಪಡಿಸಲಾಗಿದೆ. ಕೋವಿಡ್ ಸಂಭಾವ್ಯ ಮೂರನೇ ಅಲೆಯ ಮುನ್ನೆಚ್ಚರಿಕೆಗಾಗಿ ಹೆಚ್ಚಿನ ಕೋವಿಡ್ ತಪಾಸಣೆ ಕೈಗೊಳ್ಳಬೇಕು. ಪ್ರತಿಯೊಬ್ಬರೂ ಕೋವಿಡ್ ನಿಯಮಗಳನ್ನು ಪಾಲಿಸುತ್ತಿರುವ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಅಂಗನವಾಡಿ, ಆಶಾ ಹಾಗೂ ಆರೋಗ್ಯ ಕಾರ್ಯಕರ್ತೆಯರು ಪ್ರತೀ ಮನೆ-ಮನೆಗೆ ಭೇಟಿ ನೀಡಿ ಕೋವಿಡ್‌ನ ಮೊದಲ ಡೋಸ್ ಲಸಿಕೆ ಪಡೆದಿರುವ ಬಗ್ಗೆ ಖಾತ್ರಿ ಪಡಿಸಿಕೊಂಡು 2ನೇ ಲಸಿಕೆ ಪಡೆಯದವರಿಗೆ ಕೂಡಲೇ ಲಸಿಕೆ ಪಡೆಯುವ ಕುರಿತು ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳ ಪೋಷಕರು ಲಸಿಕೆ ಪಡೆದಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಐಪಂ ಸಿಇಒ ಡಾ.ಕುಮಾರ್ ಮಾತನಾಡಿ, ಜಿಲ್ಲೆಯ ಎಲ್ಲ ತಾಲೂಕುಗಳ ತಹಶೀಲ್ದಾರರು, ಆರೋಗ್ಯಾಧಿಕಾರಿಗಳು, ಅಂಗನವಾಡಿ ಹಾಗೂ ಆಶಾಕಾರ್ಯಕರ್ತೆಯರು ಹಾಗೂ ಇತರ ಸಂಬಂಧಪಟ್ಟ ಅಧಿಕಾರಿಗಳು ಜಿಲ್ಲೆಯಲ್ಲಿ 2ನೇ ಡೋಸ್ ಲಸಿಕೆ ಪಡೆಯಲು ಬಾಕಿ ಉಳಿದುಕೊಂಡಿರುವವರ ಪಟ್ಟಿ ಮಾಡಬೇಕು. ಕಾಲ್ ಸೆಂಟರ್ ನಿಂದ ಅವರಿಗೆ ದೂರವಾಣಿ ಕರೆ ಮಾಡಿ ಈ ಬಗ್ಗೆ ಮಾಹಿತಿ ನೀಡಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸದಾಶಿವ ಶ್ಯಾನುಬೋಗ್, ವಿವಿಧ ತಾಲೂಕುಗಳ ಆರೋಗ್ಯ ಅಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News