ಹೈಕೋರ್ಟ್ ಮಧ್ಯಂತರ ಆದೇಶ; ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನದ ಚುನಾವಣೆ ಮತ್ತೆ ಮುಂದೂಡಿಕೆ

Update: 2021-10-22 12:27 GMT
ಫೈಲ್ ಚಿತ್ರ

ಬೆಂಗಳೂರು, ಅ.22: ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷರ ಆಯ್ಕೆಗೆ ನಡೆಯಬೇಕಿದ್ದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅಲ್ಲದೆ, ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.  ಚುನಾವಣೆಗೆ ಮಧ್ಯಂತರ ತಡೆ ನೀಡಿದೆ.

ವಕ್ಫ್ ಮಂಡಳಿ ಅಧ್ಯಕ್ಷರ ಚುನಾವಣೆಗೆ ಸರಕಾರ ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ಕರ್ನಾಟಕ ವಕ್ಫ್ ರಕ್ಷಣಾ ಜಂಟಿ ಕ್ರಿಯಾ ಸಮಿತಿ ಸಲ್ಲಿಸಿದ್ದ ಅರ್ಜಿಯು ನ್ಯಾಯಮೂರ್ತಿ ಕಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷರ ಚುನಾವಣೆಗೆ ಮಧ್ಯಂತರ ತಡೆ ನೀಡಿ, ರಾಜ್ಯ ಸರಕಾರ, ರಾಜ್ಯ ವಕ್ಫ್ ಮಂಡಳಿಗೆ ತುರ್ತು ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿತು.

ವಕ್ಫ್ ಕಾಯ್ದೆ ಪ್ರಕಾರ ನಾಮನಿರ್ದೇಶನ ಸದಸ್ಯರಿಗಿಂತ ಚುನಾಯಿತ ಸದಸ್ಯರ ಸಂಖ್ಯೆ ಹೆಚ್ಚಿರಬೇಕು. ಆದರೆ, ಸದ್ಯ ಮಂಡಳಿಯಲ್ಲಿ ನಾಮನಿರ್ದೇಶನ ಸದಸ್ಯರ ಸಂಖ್ಯೆ ಹೆಚ್ಚಾಗಿದೆ. ಅಲ್ಲದೇ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಸಬೇಕಾದರೆ ಮಂಡಳಿ ಪರಿಪೂರ್ಣವಾಗಿ ರಚನೆಗೊಂಡಿರಬೇಕು. ಈ ಹಿನ್ನೆಲೆಯಲ್ಲಿ ಅಧ್ಯಕ್ಷರ ಸ್ಥಾನದ ಚುನಾವಣೆಗೆ ಹೊರಡಿಸಲಾಗಿರುವ ಅಧಿಸೂಚನೆ ರದ್ದುಪಡಿಸಬೇಕು ಮತ್ತು ಚುನಾವಣೆಗೆ ತಡೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು. ಅರ್ಜಿದಾರರ ಪರ ವಕೀಲ ಶ್ರೀಧರ ಪ್ರಭು ವಾದ ಮಂಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News