ದೇಶಾದ್ಯಂತ 400 ನಗರ ಕಾಡುಗಳನ್ನು ಅಭಿವೃದ್ಧಿಪಡಿಸುವ ಯೋಜನೆ: ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ

Update: 2021-10-23 05:37 GMT
ಸಾಂದರ್ಭಿಕ ಚಿತ್ರ

ಹೊಸದಿಲ್ಲಿ : ದೇಶದ ನಗರಗಳಲ್ಲಿ ಹಸಿರು ಹೊದಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯಯೋಜನೆ ಹಮ್ಮಿಕೊಂಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಪ್ರಕಟಿಸಿದ್ದಾರೆ.

ದೇಶಾದ್ಯಂತ 400 ನಗರ ಕಾಡುಗಳನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ರಾಮಬನ ಜಿಲ್ಲೆಯಲ್ಲಿ ಇಂಥ ಒಂದು ನಗರ ವನ ಅಭಿವೃದ್ಧಿಪಡಿಸಲಾಗುವುದು. ಇದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹುಟ್ಟುಹಬ್ಬದ ಕೊಡುಗೆಯಾಗಿ ಘೋಷಿಸಲಾಗಿರುವ ರಾಮಬನ ಅಭಿವೃದ್ಧಿ ಯೋಜನೆಯ ಭಾಗವಾಗಿರುತ್ತದೆ ಎಂದು ಚೌಬೆ ವಿವರಿಸಿದರು. ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಶೀಲನೆ ಮತ್ತು ಬಿಜೆಪಿ ಕಾರ್ಯಕರ್ತರ ಜತೆ ಸಂವಾದಕ್ಕಾಗಿ ಅಮಿತ್ ಶಾ ಮೂರು ದಿನಗಳ ಭೇಟಿಗೆ ಕಾಶ್ಮೀರಕ್ಕೆ ತೆರಳಿದ್ದಾರೆ.

ಪಂಚಾಯತ್‌ ರಾಜ್ ಪ್ರತಿನಿಧಿಗಳು ಮತ್ತು ಸಾರ್ವಜನಿಕರ ಜತೆ ನಡೆದ ಸಂವಾದದ ವೇಳೆ ಚೌಬೆ ಈ ವಿಷಯ ಪ್ರಕಟಿಸಿದರು. ಮಕ್ಕಳಲ್ಲಿ ಪರಿಸರ ಸ್ನೇಹಿ ಪ್ರವೃತ್ತಿಯನ್ನು ಬೆಳೆಸಲು ಸರ್ಕಾರ ಉದ್ದೇಶಿಸಿದ್ದು, ಶಿಕ್ಷಣ ಸಂಸ್ಥೆಗಳಲ್ಲಿ ನರ್ಸರಿಗಳನ್ನು ಆರಂಭಿಸುವ ಉದ್ದೇಶವೂ ಇದೆ ಎಂದು ಅವರು ತಿಳಿಸಿದರು.

ಅರಣ್ಯಗಳ ಅಭಿವೃದ್ಧಿ ಮತ್ತು ಸಂರಕ್ಷಣೆಯನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಅರಣ್ಯ ಹಕ್ಕುಗಳ ವಿಚಾರದಲ್ಲಿ ಉದಾರ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News