×
Ad

ಉಡುಪಿ ಜಿಲ್ಲೆಯ ಪ್ರವಾಸಿ ಕ್ಷೇತ್ರಗಳ ವರ್ಚುವಲ್ 3ಡಿ ಸಿದ್ದಪಡಿಸಿ: ಜಿಲ್ಲಾಧಿಕಾರಿ

Update: 2021-10-23 21:11 IST

ಉಡುಪಿ, ಅ.23: ಉಡುಪಿ ಜಿಲ್ಲೆಯಲ್ಲಿರುವ ಎಲ್ಲಾ ಪ್ರವಾಸಿ ಕ್ಷೇತ್ರಗಳನ್ನು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಒಂದೇ ವೇದಿಕೆಯಲ್ಲಿ ಕಾಣುವಂತಹ ವರ್ಚುವಲ್ 3ಡಿಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ನಿರ್ದೇಶ ನೀಡಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ಹಾಲ್‌ನಲ್ಲಿ ಶುಕ್ರವಾರ ನಡೆದ ಜಿಲ್ಲಾ ಪ್ರವಾಸೋದ್ಯಮ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಜಿಲ್ಲೆಯ ಪ್ರವಾಸೋದ್ಯಮದ ಅಭಿೃದ್ಧಿಗೆ ಅಗತ್ಯ ಸೂಚನೆ ನೀಡಿದರು.

ಉಡುಪಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಜಿಲ್ಲೆಯ ಪ್ರಮುಖ ಒಂದೆರಡು ಪ್ರವಾಸಿ ಕ್ಷೇತ್ರಗಳನ್ನು ಮಾತ್ರ ವೀಕ್ಷಣೆ ಮಾಡಿ ತೆರಳುತ್ತಿದ್ದು, ಅವರಿಗೆ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳು ನೈಜ ಚಿತ್ರಣ ತೋರುವಂತಹ ವರ್ಚುವಲ್ 3ಡಿ ಯೋಜನೆಯನ್ನು ಯಾವುದಾದರೂ ಒಂದು ಪ್ರಮುಖ ಸ್ಥಳದಲ್ಲಿ ನಿರ್ಮಿಸು ವುದರಿಂದ, ಎಲ್ಲಾ ತಾಣಗಳ ಸಮಗ್ರ ಚಿತ್ರಣ ಅವರಿಗೆ ದೊರೆಯಲಿದೆ. ಇದರಿಂದ ಈ ಎಲ್ಲಾ ತಾಣಗಳಿಗೂ ಪ್ರವಾಸಿಗರು ಭೇಟಿ ನೀಡಲು ಸಾಧ್ಯವಾಗ ಬಹುದು ಎಂದವರು ವಿವರಿಸಿದರು.

ಜಿಲ್ಲೆಯಲ್ಲಿ ಅಭಿವೃದ್ದಿ ಪಡಿಸಬಹುದಾದ ಇನ್ನೂ ಹಲವು ಪ್ರವಾಸಿ ತಾಣ ಗಳಿದ್ದು, ಇವುಗಳನ್ನು ಸಮಗ್ರವಾಗಿ ಅಭಿವೃಧ್ದಿಪಡಿಸಲು ವಿವಿಧ ಸಂಸ್ಥೆಗಳಿಂದ ವರದಿ ಪಡೆಯಲು ಹಾಗೂ ಈ ವರದಿಯೊಂದಿಗೆ ಸೂಕ್ತ ಪ್ರಸ್ತಾವನೆಯನ್ನು ಪ್ರವಾಸೋದ್ಯಮ ಇಲಾಖೆಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಕಾಪುವಲ್ಲಿ ಅಕ್ವೇರಿಯಂ: ಕಾಪು ಲೈಟ್‌ಹೌಸ್ ಬಳಿ ಬಂದರು ಇಲಾಖೆಗೆ ಸೇರಿದ 3 ಎಕ್ರೆ ಜಾಗವಿದ್ದು, ಇದರಲ್ಲಿ ಅಕ್ವೇರಿಯಂ ಸೇರಿದಂತೆ ವಿವಿಧ ವೈಧ್ಯಮಯ ಚಟುವಟಿಕೆಗಳನ್ನು ಕೈಗೊಳ್ಳಲು ಅವಕಾಶಗಳಿವೆ. ಈ ಜಾಗವನ್ನು ಪ್ರವಾಸೋದ್ಯಮ ಇಲಾಖೆಗೆ ಪಡೆಯಲು ಪ್ರಸ್ತಾವನೆ ಸಲ್ಲಿಸಿ, ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಹೊಸ ಪ್ರವಾಸೋದ್ಯಮ ಯೋಜನೆಗಳನ್ನು ಗುರುತಿಸಿ, ಸಮೀಕ್ಷೆ ನಡೆಸಿ, ಅದರ ಬ್ಲೂ ಪ್ರಿಂಟ್ ಸಿದ್ದಪಡಿಸಿ, ಅಭಿವೃದ್ದಿ ಪಡಿಸಿ. ಪ್ರವಾಸಿ ಸ್ಥಳಗಳ ಮಾಹಿತಿ ಮತ್ತು ಐತಿಹಾಸಿಕ ಹಿನ್ನಲೆಯನ್ನು ಪ್ರವಾಸಿಗರಿಗೆ ತಿಳಿಸಲು ಪ್ರವಾಸಿ ಗೈಡ್‌ಗಳನ್ನು ತರಬೇತುಗೊಳಿಸಿ ಎಂದರು.

ಜಿಲ್ಲೆಯಲ್ಲಿ ಕಯಾಕಿಂಗ್ ಜಲ ಸಾಹಸ ಕ್ರೀಡೆ ನಡೆಸಲು ಅರ್ಜಿ ಸಲ್ಲಿಸು ವವರು ಈ ಕ್ರೀಡೆಯಲ್ಲಿ ಪರಿಣಿತಿಯೊಂದಿಗೆ ನಿಯಮಾನು ಸಾರ ಎಲ್ಲಾ ಅರ್ಹತೆಗಳನ್ನು ಹೊಂದಿದ್ದರೆ, ಗರಿಷ್ಠ ಸುರಕ್ಷಾ ಸಾಧನಗಳನ್ನು ಬಳಸಿಕೊಂಡು ಕಯಾಕಿಂಗ್ ನಡೆಸಲು ಅನುಮತಿ ನೀಡಿ. ಹೌಸ್ ಬೋಟಿಂಗ್ ನಿರಂತರವಾಗಿ ನಡೆಸಲು ಅಡ್ಡಿಯಾಗಿರುವ ಮರಳು ದಿಬ್ಬಗಳನ್ನು ತೆರವುಗೊಳಿಸಲು ಈ ಭಾಗದಲ್ಲಿ ಡ್ರಜ್ಜಿಂಗ್ ನಡೆಸಲು ಪ್ರಸ್ತಾವನೆಯನ್ನು ಸಲ್ಲಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ, ಪ್ರವಾಸೋದ್ಯಮ ಚಟುವಟಿಕೆಗಳಿಗೆ ಸಿಆರ್‌ಝಡ್ ನಿಯಮ ಗಳು ಅಡಚಣೆಯಾಗಿದ್ದಲ್ಲಿ ಅಂತಹ ಪ್ರಕರಣಗಳ ಬಗ್ಗೆ ಜಿಲ್ಲಾ ಸಿಆರ್‌ಝಡ್ ಸಮಿತಿ ಸಭೆಯ ಗಮನಕ್ಕೆ ತನ್ನಿ. ತಾಂತ್ರಿಕ ಸಮಸ್ಯೆಗಳು ಮತ್ತು ಇತರೆ ಸಣ್ಣಪುಟ್ಟ ಸಮಸ್ಯೆಗಳ ಬಗ್ಗೆ ನಿರ್ಧಾರ ಕೈಗೊಳ್ಳಲು ಉಪ ಸಮಿತಿಯನ್ನು ರಚಿಸಿ ಎಂದರು.

ಪ್ರವಾಸೋದ್ಯಮ ಇಲಾಖೆಯ ಮೂಲಕ ವಿವಿಧ ಅನುಷ್ಠಾನ ಸಂಸ್ಥೆಗಳಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯ ಗೊಳಿಸಬೇಕು ಎಂದರು.

ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕ್ಲಿಫರ್ಡ್ ಲೋಬೋ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಪ್ರವಾಸೋದ್ಯಮ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News