ಲಸಿಕೆ ಪಡೆಯದ ಫಲಾನುಭವಿಗಳನ್ನು ಗುರುತಿಸಿ, ವ್ಯಾಕ್ಸಿನ್ ಕೊಡಿಸಿ: ಪೊನ್ನುರಾಜ್

Update: 2021-10-25 17:06 GMT

ಮಂಗಳೂರು, ಅ.25: ಕೊವಿಡ್ ಸೋಂಕಿನ ಲಸಿಕೆ ಪಡೆಯದ ಫಲಾನುಭವಿಗಳನ್ನು ಕೂಡಲೇ ಗುರುತಿಸಿ ವ್ಯಾಕ್ಸಿನ್ ನೀಡಲು ಸಾಧ್ಯವಿರುವ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಈ ಬಗ್ಗೆ ವ್ಯಾಪಕ ಜನಜಾಗೃತಿ ಮೂಡಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್-19 ಲಸಿಕಾಕರಣಕ್ಕೆ ಸಂಬಂಧಿಸಿ ಹಮ್ಮಿಕೊಳ್ಳಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಂಗನವಾಡಿ, ಆಶಾ ಹಾಗೂ ಆರೋಗ್ಯ ಕಾರ್ಯಕರ್ತರು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಪ್ರದೇಶದಲ್ಲಿನ ಮನೆ-ಮನೆಗೆ ಸಮೀಕ್ಷೆ ಕೈಗೊಳ್ಳಬೇಕು. ಆ ಕುಟುಂಬದ ಸದಸ್ಯರಲ್ಲಿ ಕೋವಿಡ್ ಲಸಿಕೆ ಪಡೆಯದ ಫಲಾನುಭವಿಗಳ ಮಾಹಿತಿ ಸಂಗ್ರಹಿಸಬೇಕು. ಮುಖ್ಯವಾಗಿ ಲಸಿಕೆ ಪಡೆಯುವಂತೆ ಅವರಲ್ಲಿ ಜಾಗೃತಿ ಮೂಡಿಸಬೇಕು. ಇದನ್ನು ವ್ಯವಸ್ಥಿತವಾಗಿ ನಿರ್ವಹಿಸ ಬೇಕು. ಮನೆ-ಮನೆಗೆ ಸಮೀಕ್ಷೆ ಸಂಬಂಧ ಆರೋಗ್ಯ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ತಂಡ ರಚಿಸಿಕೊಂಡು ಲಸಿಕೆ ಪಡೆಯದವರ ಪತ್ತೆಗೆ ಕ್ರಮ ವಹಿಸುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮಾತನಾಡಿ, ಆರೋಗ್ಯ ಇಲಾಖೆ ಅಧಿಕಾರಿಗಳು, ಮೇಲ್ವಿಚಾರಕರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಪಂ ಮಟ್ಟದಲ್ಲಿ ಮನೆ-ಮನೆ ಸಮೀಕ್ಷೆ ನಡೆಸಿ ಲಸಿಕೆ ಪಡೆಯದವರ ಮಾಹಿತಿ ಸಂಗ್ರಹಿಸಿಬೇಕು. ಇದನ್ನು ಗಂಭೀರವಾಗಿ ಪರಿಗಣಿಸುವಂತೆ ತಾಕೀತು ಮಾಡಿದರು.

ಮಂಗಳೂರು ನಗರದಲ್ಲಿರುವ ಅಪಾರ್ಟ್‌ಮೆಂಟ್‌ಗಳ ಸಂಘದ ಸಂಯುಕ್ತಾಶ್ರಯದಲ್ಲಿ ಪ್ರತೀ ಮನೆ-ಮನೆಗಳಲ್ಲಿ ಲಸಿಕೆ ಪಡೆಯದ ಫಲಾನುಭವಿಗಳನ್ನು ಗುರುತಿಸಬೇಕು. ಅವರ ಪಟ್ಟಿ ಸಿದ್ಧಪಡಿಸಬೇಕು. ಹೆಲ್ಪ್‌ಲೈನ್ ಮೂಲಕವೂ ಲಸಿಕೆ ಪಡೆಯದ ಫಲಾನುಭವಿ ಗಳ ಮಾಹಿತಿ ಪಡೆದು, ಅವರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಪಂ ಸಿಇಒ ಡಾ.ಕುಮಾರ್, ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಿಶೋರ್‌ ಕುಮಾರ್, ಜಿಲ್ಲೆಯ ಎಲ್ಲ ತಹಶೀಲ್ದಾರರು, ತಾಪಂ ಇಒಗಳು, ಸಿಡಿಪಿಒಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News