ಕೇಂದ್ರ, ರಾಜ್ಯದ ಯೋಜನೆಗಳು 100% ರೈತರಿಗೆ ತಲುಪಿವೆ: ಸಚಿವೆ ಶಶಿಕಲಾ ಜೊಲ್ಲೆ

Update: 2021-10-26 06:18 GMT

ವಿಜಯಪುರ : ರೈತರಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಿಸಾನ್ ಸಮ್ಮಾನ್, ಫಸಲ್ ಬಿಮಾ ಯೋಜನೆ ಹಾಗೂ ರೈತರ ಮಕ್ಕಳಿಗೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿದ್ಯಾನಿಧಿ ಯೋಜನೆಗಳು ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ಶೇ 100 ರಷ್ಟು ಫಲಾನುಭವಿಗಳಿಗೆ ತಲುಪಿವೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆಯವರು ಹೇಳಿದ್ದಾರೆ.

ಮಂಗಳವಾರ ಬೆಳಗ್ಗೆ ವಿಜಯಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವುದರಿಂದ ಬಿಜೆಪಿ ಅಭ್ಯರ್ಥಿ ರಮೇಶ ಬೂಸನೂರು ಅವರು ಗೆಲ್ಲಬೇಕೆನ್ನುವುದು ಸಿಂಧಗಿ ಕ್ಷೇತ್ರದ ಜನರ ಅಪೇಕ್ಷೆಯಾಗಿದೆ ಎಂದು ಹೇಳಿದರು.

ರಮೇಶ ಬೂಸನೂರು ಅವರು ಶಾಸಕರಾಗಿದ್ದಾಗ ಕ್ಷೇತ್ರದ ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ಭವನ, ಶಾದಿಮಹಲ್, ಅಂಬೇಡ್ಕರ್ ಭವನ, ದೇವಸ್ಥಾನಗಳಿಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಅವರು ಅಧಿಕಾರದಲ್ಲಿ ಇಲ್ಲದಿದ್ದರೂ ಕೊರೋನ ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ನೆರವು ನೀಡುವ ಕೆಲಸ ಮಾಡಿದ್ದಾರೆ. ಈಗ ಅವರು ಮತ್ತೆ ಚುನಾವಣೆಯಲ್ಲಿ ಗೆದ್ದುಬಂದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಇನ್ನಷ್ಟು ಯೋಜನೆಗಳನ್ನು ತಂದು ಕ್ಷೇತ್ರದ ಅಭಿವೃದ್ಧಿ ಮಾಡಲು ಅನುಕೂಲವಾಗುತ್ತದೆ. ಈ ಚುನಾವಣೆಯಲ್ಲಿ ರಮೇಶ ಬೂಸನೂರು ಅವರು ಕನಿಷ್ಟ 25,000 ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.

ಬೃಹತ್ ಮಹಿಳಾ ಸಮಾವೇಶ

ಸಿಂಧಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕನ್ನೊಳ್ಳಿಯಲ್ಲಿ ಇಂದು ಸಂಜೆ ಬೃಹತ್ ಮಹಿಳಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ಭಾಗದಲ್ಲಿ ಮಹಿಳೆಯರು ಹೊರಗೆ ಬರಲು ಹಿಂಜರಿಯುತ್ತಾರೆ. ಈಗ ನಾವು ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದರಿಂದ ಅನೇಕ ಮಹಿಳೆಯರು ಹೊರಗೆ ಬಂದು ತಮ್ಮ ಸಮಸ್ಯೆ ಹೇಳಿಕೊಳ್ಳುತ್ತಿದ್ದಾರೆ. ಇದುವರೆಗೂ ಮಹಿಳೆಯರು ಮನೆಯವರು ಹೇಳಿದ ಪಕ್ಷಕ್ಕೆ ಮತ ಹಾಕಿ ಸುಮ್ಮನಾಗುತ್ತಿದ್ದರು. ಅವರ ಸಮಸ್ಯೆ ಏನು ಎಂದು ಹೇಳಿಕೊಳ್ಳುತ್ತಿರಲಿಲ್ಲ. ಈಗ ಮಹಿಳೆಯರು ತಮ್ಮ ಸ್ವಂತ ಇಚ್ಚೆಯಿಂದ ಮತದಾನ ಮಾಡಿ, ತಮ್ಮ ಸಮಸ್ಯೆ ಹೇಳಿಕೊಳ್ಳುವಂತೆ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದರು.

ಸಿಂಧಗಿ ಕ್ಷೇತ್ರದಲ್ಲಿ ಸಚಿವರಾದ ಸೋಮಣ್ಣ, ಗೋವಿಂದ ಕಾರಜೋಳ, ಬೈರತಿ ಬಸವರಾಜ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ನಾನು ಎಲ್ಲರೂ ಒಗ್ಗಟ್ಟಿನಿಂದ ಪ್ರಚಾರ ಮಾಡುತ್ತಿದ್ದು, ರಮೇಶ ಬೂಸನೂರು ಅವರ ಗೆಲುವು ಖಚಿತ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News