ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಿರುವ ಕಟ್ಟಡಗಳ ತೆರವಿಗೆ ಮೀನಾಮೇಷ: ಹೈಕೋರ್ಟ್ ಅಸಮಾಧಾನ

Update: 2021-10-27 12:22 GMT

ಬೆಂಗಳೂರು, ಅ.27: ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಿರುವ ಕಟ್ಟಡಗಳನ್ನು ತೆರವುಗೊಳಿಸಲು ಮೀನಾಮೇಷ ಎಣಿಸುತ್ತಿರುವ ಬಿಬಿಎಂಪಿ ಹಾಗೂ ಸರಕಾರದ ನಿಲುವಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. 

2019ರಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತಂತೆ ಬುಧವಾರವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ನಕ್ಷೆಗೆ ವಿರುದ್ಧವಾಗಿ ಕಟ್ಟಿರುವ ಕಟ್ಟಡಗಳನ್ನು ಗುರುತಿಸಿ ಅವುಗಳನ್ನು ತೆರವುಗೊಳಿಸಲು ನೀಡಿದ್ದ ಸೂಚನೆ ಸಂಬಂಧ ನೀವು ಏನು ಮಾಡಿದ್ದೀರಿ ಎಂದು ಪ್ರಶ್ನಿಸಿತ್ತು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ ನಾಲ್ಕು ಸಾವಿರಕ್ಕೂ ಹೆಚ್ಚು ಕಟ್ಟಡಗಳ ಮಾಲಕರಿಗೆ ನೋಟಿಸ್ ನೀಡಲಾಗಿದೆ. ಇದಲ್ಲದೆ, ಸುಪ್ರೀಂಕೋರ್ಟ್‍ನಲ್ಲಿ ಅಕ್ರಮ-ಸಕ್ರಮ ಕುರಿತಂತೆ ವಿಚಾರಣೆ ಬಾಕಿ ಇದೆ ಎಂದು ಸರಕಾರದ ಪರ ವಕೀಲರು ಪೀಠಕ್ಕೆ ಅಫಿಡವಿಟ್ ಸಲ್ಲಿಸಿದರು. 

ಇದನ್ನು ಪರಿಶೀಲಿಸಿದ ಪೀಠವು ನೀವು ಸಲ್ಲಿಸಿರುವ ಅಫಿಡವಿಟ್ ಸಮರ್ಪಕವಾಗಿಲ್ಲ. ನಾವು ನೀಡಿರುವ ಆದೇಶವನ್ನು ನೀವು ಪಾಲಿಸುತ್ತಿಲ್ಲ. ಅಕ್ರಮವಾಗಿ ನಿರ್ಮಿಸಿರುವ ಕಟ್ಟಡಗಳನ್ನು ಏಕೆ ತೆರವುಗೊಳಿಸುತ್ತಿಲ್ಲ ಎಂದು ನ್ಯಾಯಮೂರ್ತಿಗಳು ಪ್ರಶ್ನಿಸಿದರು. ಬಿಬಿಎಂಪಿ ವಿಶೇಷ ಆಯುಕ್ತ ಗೌರವ್ ಗುಪ್ತ ಅವರು ನ್ಯಾಯಾಲಯದಲ್ಲಿ ಹಾಜರಿದ್ದು, ಸದ್ಯದಲ್ಲೇ ಬಿಬಿಎಂಪಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿ ಸಂಕ್ಷಿಪ್ತ ವರದಿ ನೀಡುವುದಾಗಿ ತಿಳಿಸಿದರು.

ಮುಂದಿನ ಡಿ.9ರೊಳಗೆ ಸಾರ್ವಜನಿಕ ಸ್ಥಳಗಳಲ್ಲಿ ಕಟ್ಟಡಗಳ ತೆರವಿಗೆ ಸಂಬಂಸಿದಂತೆ ಮತ್ತು ಕೈಗೊಂಡಿರುವ ಕ್ರಮಗಳ ಕುರಿತು ಸಂಕ್ಷಿಪ್ತ ವರದಿ ನೀಡಬೇಕು ಎಂದು ತಾಕೀತು ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News