ಕನ್ನಡ ಭಾಷೆ, ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸುವ ಉತ್ತಮ ಪ್ರಯೋಗ: ಸಂಸದ ನಳಿನ್ ಕುಮಾರ್

Update: 2021-10-28 08:12 GMT

ಮಂಗಳೂರು : ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ ಗುರುವಾರ ಆಯೋಜಿಸಲಾಗಿರುವ 'ಲಕ್ಷಕಂಠಗಳ ಕನ್ನಡ ಗೀತಗಾಯನ' ಕಾರ್ಯಕ್ರಮ ನಾಡಿನ ಜನರಲ್ಲಿ ಭಾಷೆ, ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸುವುದು ಉತ್ತಮ ಪ್ರಯೋಗ ಎಂದು  ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಅವರು ಇಂದು ನಗರದ ತಣ್ಣೀರು ಬಾವಿ ಬೀಚ್ ನಲ್ಲಿ ದ.ಕ. ಜಿಲ್ಲಾಡಳಿತ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಹಮ್ಮಿಕೊಂಡ ಕನ್ನಡಕ್ಕಾಗಿ ನಾವು ಲಕ್ಷ ಕಂಠಗಳ ಸಾಮೂಹಿಕ  ಗೀತಗಾಯನ  ಕಾರ್ಯಕ್ರಮಕ್ಕೆ  ಚಾಲನೆ ನೀಡಿ ಮಾತನಾಡಿದರು.

ಗೀತಗಾಯನ ಕಾರ್ಯಕ್ರಮವನ್ನು ಸರಕಾರದ ಕನ್ನಡ ಸಂಸ್ಕೃತಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದೆ. ದ.ಕ.ಜಿಲ್ಲೆಯಲ್ಲಿ ಕಾರ್ಯಕ್ರಮವನ್ನು ಯಶಸ್ಸುಗೊಳಿಸಿದ ಜಿಲ್ಲಾಧಿಕಾರಿ ಹಾಗೂ ಇತರ ಅಧಿಕಾರಿಗಳನ್ನು ಅಭಿನಂದಿಸುವುದಾಗಿ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.       

ಸಮಾರಂಭದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವ, ಪ್ರೊ.ಕೆ.ಎಸ್. ನಿಸಾರ್ ಅಹ್ಮದ್ ಅವರ ಜೋಗದ ಸಿರಿ ಬೆಳಕಿನಲ್ಲಿ ಹಾಗೂ ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಗೀತೆಗಳನ್ನು ನಗರದ ವಿವಿಧ ಶಾಲಾ ವಿದ್ಯಾರ್ಥಿಗಳು ಸಾಮೂಹಿಕವಾಗಿ ಹಾಡಿದರು.

ಕಾರ್ಯಕ್ರಮದ ಅಂಗವಾಗಿ ಎನ್.ಎಮ್.ಪಿ.ಟಿ, ವಿಮಾನ ನಿಲ್ದಾಣ, ರೈಲು-ಬಸ್ ನಿಲ್ದಾಣಗಳು, 10 ಜನಕ್ಕೂ ಹೆಚ್ಚಿರುವ ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು ಸೇರಿದಂತೆ ಎಲ್ಲೆಡೆ ಏಕಕಾಲಕ್ಕೆ ಸಾಮೂಹಿಕ ಗೀತಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಆ ಮೂಲಕ ಕನ್ನಡ ನಾಡು, ನುಡಿ, ಸಂಸ್ಕೃತಿಗಳ ಬಗ್ಗೆ ಜಾಗೃತಿ ಮೂಡಿಸುವ ಭಾಗವಾಗಿ ಈ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ತಿಳಿಸಿದ್ದಾರೆ.

ಸಮಾರಂಭದಲ್ಲಿ ದ.ಕ.ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್, ಕಸಾಪ ನಿಕಟಪೂರ್ವ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಮೊದಲಾದವರು ಉಪಸ್ಥಿತರಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಲ್ಲೇಸ್ವಾಮಿ ಸ್ವಾಗತಿಸಿದರು. ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News