ಪ್ರಭಾವಿಗಳಿದ್ದರೆ ಹೆಸರು ಬಹಿರಂಗಪಡಿಸಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Update: 2021-10-28 13:03 GMT

ಹುಬ್ಬಳ್ಳಿ, ಅ. 28: ‘ಮಾದಕ ವಸ್ತುಗಳ ಕಳ್ಳ ಸಾಗಾಣೆ, ಬಿಟ್ ಕಾಯಿನ್ ಸೇರಿದಂತೆ ಇನ್ನಿತರ ಅಕ್ರಮ ಪ್ರಕರಣದಲ್ಲಿ ಯಾವುದೇ ಪ್ರಭಾವಿ ರಾಜಕಾರಣಿಗಳು ಭಾಗಿಯಾಗಿದ್ದರೆ, ಅವರ ಹೆಸರನ್ನು ಬಹಿರಂಗಪಡಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯರಿಗೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಬಿಟ್ ಕಾಯಿನ್ -ಡ್ರಗ್ಸ್ ಹಗರಣದಲ್ಲಿ ರಾಜಕಾರಣಿಗಳು ಭಾಗಿಯಾಗಿರುವ ಬಗ್ಗೆ ಅಕ್ಟೋಬರ್ 19ರಂದು 'ಸಂಯುಕ್ತ ಕರ್ನಾಟಕ'ದ ಮುಖಪುಟದಲ್ಲಿ ''ಬಿಟ್ ಕಾಯಿನ್ -ಡ್ರಗ್ಸ್ ಹಗರಣ ಜೋಡಿ ನಾಯಕರ ನೆರಳು, ತಲ್ಲಣ ಉಂಟು ಮಾಡಿದೆ ಕೇಂದ್ರ ತನಿಖಾ ಸಂಸ್ಥೆಗಳ ನಡೆ'' ಎಂಬ ಶೀರ್ಷಿಕೆಯಲ್ಲಿ ಶಿವಕುಮಾರ ಮೆಣಸಿನಕಾಯಿ ಅವರ ವಿಶೇಷ ವರದಿ ಪ್ರಕಟವಾಗಿತ್ತು.

ಬಳಿಕ ಈ ಹಗರಣದ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅ.27ರಂದು ತನ್ನ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿ,  ಡ್ರಗ್ಸ್ ಹಾಗೂ ಬಿಟ್ ಕಾಯಿನ್ ಹಗರಣದಲ್ಲಿ ರಾಜ್ಯದ ಪ್ರಭಾವಿ ರಾಜಕಾರಣಿಗಳಿದ್ದಾರೆ ಎಂಬ ಮಾಹಿತಿ ಇದೆ. ಇದೇ ಕಾರಣಕ್ಕೆ ತನಿಖಾಧಿಕಾರಿಗಳು ಪ್ರಕರಣ ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎಂಬ ವರದಿ ಕಳವಳಕಾರಿಯಾದುದು. ಕೇಂದ್ರ ತನಿಖಾ ಸಂಸ್ಥೆಗಳ‌ ಮೇಲೆ ಕೇಂದ್ರ ಬಿಜೆಪಿ ಸರಕಾರ ಪ್ರಭಾವ ಬೀರಿ ತನಿಖೆಯ ಹಾದಿ ತಪ್ಪಿಸದೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು.'' ಎಂದು ದೂರಿದ್ದರು. 

ಇದೀಗ ಸಿದ್ದರಾಮಯ್ಯ ಅವರ ಆರೋಪಕ್ಕೆ ಪ್ರತಿಕ್ರಿಯೆ ಸೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, 'ಡ್ರಗ್ಸ್ ಪ್ರಕರಣದ ಬಗ್ಗೆ ರಾಜ್ಯದ ಪೊಲೀಸರು ಹಾಗೂ ತನಿಖಾ ಸಂಸ್ಥೆಗಳು ತನಿಖೆ ಕೈಗೊಂಡಿದೆ. ಇದೇ ವೇಳೆ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐಗೆ ನಾವೇ ವಹಿಸಿದ್ದೇವೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ' ಎಂದು ಸ್ಪಷ್ಟಣೆ ನೀಡಿದರು.

'ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸುಖಾಸುಮ್ಮನೆ ಆರೋಪ ಮಾಡುವುದು ಬೇಡ. ಅವರಿಗೆ ಯಾರಾದಾದರೂ ಹೆಸರುಗಳು ಗೊತ್ತಿದ್ದರೆ ಬಹಿರಂಗಪಡಿಸಲಿ. ಬಿಟ್ ಕಾಯಿನ್ ಹಗರಣವನ್ನು ರಾಜ್ಯಸರಕಾರ ಮುಚ್ಚಿ ಹಾಕಲು ಪ್ರಯತ್ನ ನಡೆಸಿದೆ ಎಂಬ ಆರೋಪ ಮಾಡುವುದು ಸರಿಯಲ್ಲ' ಎಂದು ಅವರು ಆಕ್ಷೇಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News