ದೀಪಾವಳಿ: ಹೊಸ ಮಾರ್ಗಸೂಚಿ ಜಾರಿ ಬಗ್ಗೆ ಚರ್ಚಿಸಿ ನಿರ್ಧಾರ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕೊರೋನ ಸೋಂಕು ಹೆಚ್ಚದಂತೆ ಹೊಸ ಮಾರ್ಗಸೂಚಿಯನ್ನು ಜಾರಿಗೆ ಮಾಡಬೇಕೆಂಬುದರ ಬಗ್ಗೆ ಚರ್ಚಿಸಿ ನಿರ್ಧಾರ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೀಪಾವಳಿ ಹಬ್ಬಕ್ಕೆ ಮಾರ್ಗಸೂಚಿ ಕುರಿತು ಸುಪ್ರೀಂಕೋರ್ಟ್ ಆದೇಶವೂ ಇದೆ. ಯಾವೆಲ್ಲ ನಿಯಮಗಳನ್ನು ಜಾರಿ ಮಾಡಬೇಕು ಎಂಬುದರ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ನಿರ್ಧಾರ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದರು.
ಬೆಂಗಳೂರಿನಲ್ಲಿ ರಸ್ತೆಗುಂಡಿಗಳು ಹೆಚ್ಚುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಒಂದು ವಾರದಲ್ಲಿ ರಸ್ತೆಗುಂಡಿಗಳನ್ನು ಮುಚ್ಚಲು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಸಂಬಂಧ ಈಗಾಗಲೇ ಬಿಬಿಎಂಪಿ ಆಯುಕ್ತರು ಸೇರಿದಂತೆ ಮತ್ತಿತರ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಒಂದು ವಾರದ ಬಳಿಕ ನಾನೇ ನಗರ ಸಂಚಾರ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.