ಸಿಂದಗಿ ಉಪ ಚುನಾವಣೆ: ಬಿಜೆಪಿಗೆ ಭರ್ಜರಿ ಗೆಲುವು
ವಿಜಯಪುರ, ನ.2: ಸಿಂದಗಿ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ, ಮಾಜಿ ಶಾಸಕ ರಮೇಶ ಭೂಸನೂರ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಚಲಾವಣೆಯಾದ ಒಟ್ಟು 1,63,782 ಮತಗಳ ಪೈಕಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ್ 93,865(ಶೇ.57.31) ಮತಗಳನ್ನು ಪಡೆದರೆ, ಅವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ 62,680(ಶೇ.38.27) ಮತಗಳನ್ನು ಪಡೆದಿದ್ದಾರೆ. ಆ ಮೂಲಕ ರಮೇಶ್ ಭೂಸನೂರ್, ಅಶೋಕ್ ಮನಗೂಳಿ ಅವರನ್ನು 31,185 ಮತಗಳ ಅಂತರದಿಂದ ಸೋಲಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಾಝಿಯಾ ಶಕೀಲ್ ಅಂಗಡಿ 4353 ಮತಗಳಿಗೆ ತೃಪ್ತಿಪಟ್ಟಿದ್ದಾರೆ.ಮತ ಎಣಿಕೆಯ ಆರಂಭದಿಂದಲೇ ಮುನ್ನಡೆ ಕಾಯ್ದುಕೊಂಡಿದ್ದ ರಮೇಶ ಭೂಸನೂರ ಬಳಿಕ ಪ್ರತೀ ಸುತ್ತಿನ ಎಣಿಕೆಯಲ್ಲೂ ಮತ ಗಳಿಕೆಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಲೇ ಸಾಗಿತು. ಅಂತಿಮವಾಗಿ ಅವರು 93,380 ಮತಗಳನ್ನು ಗಳಿಸಿ ಭರ್ಜರಿ ಗೆಲುವು ಸಾಧಿಸಿದರು.
ರಮೇಶ್ ಭೂಸನೂರು ಕಿರು ಪರಿಚಯ
ಸಿಂದಗಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿರುವ ರಮೇಶ್ ಭೂಸನೂರು ಮೂರನೆ ಬಾರಿ ವಿಧಾನಸಭೆ ಪ್ರವೇಶಿಸುತ್ತಿದ್ದಾರೆ. 2008ರಲ್ಲಿ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದ ರಮೇಶ್ ಭೂಸನೂರು, ಮಾಜಿ ಸಿಎಂ ಯಡಿಯೂರಪ್ಪ ಬಿಜೆಪಿಗೆ ರಾಜೀನಾಮೆ ನೀಡಿ ಕೆಜೆಪಿ ಕಟ್ಟಿದಾಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.
2013ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಅಲ್ಲದೆ, 2018ರ ಚುನಾವಣೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂ.ಸಿ.ಮನಗೂಳಿ ವಿರುದ್ಧ ಸೋಲು ಅನುಭವಿಸಿದ್ದರು.
ಕಾಂಗ್ರೆಸ್ ಪಕ್ಷವು ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಎಂ.ಸಿ.ಮನಗೂಳಿ ಅವರ ಪುತ್ರ ಅಶೋಕ್ ಮನಗೂಳಿ ಅವರನ್ನು ಅಭ್ಯರ್ಥಿಯಾಗಿ ಘೋಷಿಸುವ ಮಾಹಿತಿಯನ್ನು ಅರಿತು ರಮೇಶ್ ಭೂಸನೂರು ಪುನಃ ಬಿಜೆಪಿ ಸೇರ್ಪಡೆಯಾದರು. ಇದೀಗ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಮಣಿಸಿ ಮೂರನೆ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.