ಡೆಂಗ್ಯೂ ಪ್ರಕರಣಗಳ ಹೆಚ್ಚಳ: 9 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ತಂಡಗಳನ್ನು ಕಳುಹಿಸಿದ ಕೇಂದ್ರ
ಹೊಸದಿಲ್ಲಿ: ಡೆಂಗ್ಯೂ ಹರಡುವಿಕೆಯನ್ನು ತಡೆಗಟ್ಟಲು ಕೇಂದ್ರ ಸರಕಾರವು ಮಂಗಳವಾರ ಒಂಬತ್ತು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ತಜ್ಞರ ತಂಡಗಳನ್ನು ಕಳುಹಿಸಿದೆ ಎಂದು ಪಿಟಿಐ ವರದಿ ಮಾಡಿದೆ.
ದಿಲ್ಲಿ, ಹರ್ಯಾಣ, ಪಂಜಾಬ್, ಕೇರಳ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ.
ಈ ವರ್ಷ ದಿಲ್ಲಿಯಲ್ಲಿ 1,530 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಇವುಗಳಲ್ಲಿ ಸುಮಾರು 1,200 ಪ್ರಕರಣಗಳು ಅಕ್ಟೋಬರ್‌ವೊಂದರಲ್ಲೇ ದಾಖಲಾಗಿವೆ. ಇದು ಕಳೆದ ನಾಲ್ಕು ವರ್ಷಗಳಲ್ಲಿ ತಿಂಗಳ ಅತ್ಯಧಿಕ ಪ್ರಕರಣವಾಗಿದೆ.
ಪಂಜಾಬ್ ಅಕ್ಟೋಬರ್ 31 ರವರೆಗೆ 16,129 ಡೆಂಗ್ಯೂ ಪ್ರಕರಣಗಳನ್ನು ವರದಿ ಮಾಡಿದೆ. ಇದು 2017 ರಿಂದ ಅತಿ ಹೆಚ್ಚು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ಕೇಂದ್ರವು ನಿಯೋಜಿಸಿದ ತಜ್ಞರ ತಂಡಗಳಲ್ಲಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ಹಾಗೂ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗ ನಿಯಂತ್ರಣ ಕಾರ್ಯಕ್ರಮದ ಅಧಿಕಾರಿಗಳು ಸೇರಿದ್ದಾರೆ.