ಕೋಟ : ನಿರ್ಮಾಣ ಹಂತದಲ್ಲಿದ್ದ ಮನೆಯ ಸ್ಲ್ಯಾಬ್ ಕುಸಿತ; ಓರ್ವ ಸ್ಥಳದಲ್ಲೇ ಮೃತ್ಯು
Update: 2021-11-03 14:46 IST
ಕೋಟ : ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮದ ಪಡುಕೆರೆ ಶಿರಸಿ ಹತ್ತಿರ ನಿರ್ಮಾಣ ಹಂತದಲ್ಲಿದ್ದ ಮನೆಯ ಸ್ಲ್ಯಾಬ್ ಕುಸಿದು ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವನಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬುಧವಾರ ನಡೆದಿದೆ.
ಗಾರೆ ಕೆಲಸ ಮಾಡಿಕೊಂಡಿದ್ದ ಸಾಲಿಗ್ರಾಮ ಗೆಂಡೆಕೆರೆ ನಿವಾಸಿ ಮಂಜುನಾಥ್ (38) ಮೃತರು ಎಂದು ಗುರುತಿಸಲಾಗಿದೆ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಚೇತನ್ ಪೂಜಾರಿ (28) ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಬೆಳಗ್ಗೆ ಸ್ಲ್ಯಾಬ್ ನ ಸಪೋರ್ಟ್ ಗಳನ್ನು ತೆಗೆಯುತ್ತಿದ್ದಾಗ ಈ ಘಟನೆ ನಡೆದಿದ್ದು, ಸ್ಲ್ಯಾಬ್ ಕುಸಿದು ಮಂಜುನಾಥ್ ಅವರ ಮೇಲೆ ಬಿದ್ದು ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಕೋಟ ಠಾಣಾಧಿಕಾರಿ ಸಂತೋಷ್ ಬಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.