ನ.15ರ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮ ಮುಂದೂಡಿಕೆ
ಉಡುಪಿ, ನ.10: ಉಡುಪಿಯಲ್ಲಿ ನ.15ರಂದು ನಡೆಸಲು ಉದ್ದೇಶಿಸಿದ್ದ 68ನೆ ಅಖಿಲ ಭಾರತ ಸಹಕಾರ ಸಪ್ತಾಹದ ಎರಡನೇ ದಿನದ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಜನವರಿ ತಿಂಗಳಿಗೆ ಮುಂದೂಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ನಗರದ ಹೋಟೆಲ್ ಡಯಾನ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಬಳಿಕ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಚಾರವನ್ನು ಪ್ರಕಟಿಸಿದರು. ಉಡುಪಿಯಲ್ಲಿ ಈ ಕಾರ್ಯಕ್ರಮವನ್ನು ಅದ್ದೂರಿ ಹಾಗೂ ಅರ್ಥ ಪೂರ್ಣವಾಗಿ ಆಚರಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಲಾಗಿತ್ತು. ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಭಾಗವಹಿಸಲು ಅವಕಾಶ ಇರುವುದಿಲ್ಲ. ಆದುದರಿಂದ ನಾವು ಇಂದಿನ ಸಭೆ ಯಲ್ಲಿ ನಿರ್ಣಯಿಸಿದಂತೆ ಈ ಕಾರ್ಯಕ್ರಮವನ್ನು ಮುಂದೂಡಿದ್ದೇವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ದ.ಕ. ಜಿಲ್ಲಾ ಯೂನಿಯನ್ ಅಧ್ಯಕ್ಷ ಬೆಳ್ಳಿಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ದ.ಕ. ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ, ರಾಜು ಪೂಜಾರಿ, ಕುಂದಾಪುರ ಸಹಾಯಕ ನಿಬಂಧಕ ಅರುಣ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.