×
Ad

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

Update: 2021-11-10 21:34 IST

ಧಾರವಾಡ, ನ.10: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಗೆ 2ನೆ ಅಧಿಕ ಜಿಲ್ಲಾ ಸತ್ರ ಮತ್ತು ವಿಶೇಷ ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ ಹಾಗೂ ಒಟ್ಟು 55 ಸಾವಿರ ದಂಡ ವಿಧಿಸಿ ಆದೇಶಿಸಿದೆ.

ಸೈಯದ್ ಸಾಜೀದ್ ಹುಸೇನ್ ಸುಲೇದಾರ್ ಎಂಬಾತನೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ತಪ್ಪಿತಸ್ಥನಾಗಿದ್ದು, ಈತನ ಮೇಲಿನ ಸಾಕ್ಷಿಗಳು ಸಾಬೀತಾದ ಹಿನ್ನೆಲೆ ನ್ಯಾಯಾಲಯ ಈ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಧಾರವಾಡ ನಗರದ ಪ್ರತಿಷ್ಠಿತ ಕಾಲೇಜಿನ ಬಾಲಕಿಗೆ ಈತ 2018ರ ಆ. 21ರಂದು ಕೊಲೆ ಬೆದರಿಕೆ ಹಾಕಿ, ಅಪಹರಿಸಿ ಲಾಡ್ಜ್‍ನಲ್ಲಿ ಬಂಧಿಸಿಟ್ಟಿದ್ದನು. ನಂತರ ಬಾಲಕಿಯನ್ನು ಬೆಂಗಳೂರಿಗೆ ಕರೆದೊಯ್ದು ಐದು ದಿನಗಳ ಕಾಲ ಅಕ್ರಮ ಬಂಧನದಲ್ಲಿಟ್ಟು ಲೈಂಗಿಕ ದೌರ್ಜನ್ಯ ಎಸಗಿದ್ದ. 

ಈ ಕುರಿತು ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಬಂಧಿಸಿದ ಪೊಲೀಸರು ತನಿಖೆ ನಡೆಸಿ, ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಸಿ. ಸದಾನಂದಸ್ವಾಮಿ, ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ್ದಾರೆ. ಸರಕಾರದ ಪರ ಸರಕಾರಿ ಅಭಿಯೋಜಕಿ ಗಿರಿಜಾ ತಮ್ಮಿನಾಳ ವಾದ ಮಂಡಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News