ಅಕ್ರಮ ಗಣಿಗಾರಿಕೆ ನಡೆಸಿದವರ ವಿರುದ್ಧ ಕ್ರಮ ಏಕಿಲ್ಲ: ಸರಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ

Update: 2021-11-12 12:45 GMT

ಬೆಂಗಳೂರು, ನ.12: ತುಮಕೂರಿನ ಕೊರಟಗೆರೆ ತಾಲೂಕಿನ ಬರ್ಕ ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದವರ ವಿರುದ್ಧ ಕ್ರಮ ಜರುಗಿಸಿಲ್ಲವೇಕೆ ಎಂದು ಪ್ರಶ್ನಿಸಿರುವ ಹೈಕೋರ್ಟ್, ಈ ಸಂಬಂಧ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಸರಕಾರಕ್ಕೆ ನಿರ್ದೇಶಿಸಿದೆ.

ಅಕ್ರಮ ಗಣಿಗಾರಿಕೆ ಪ್ರಶ್ನಿಸಿ ಬರ್ಕ ಗ್ರಾಮದ ನಿವಾಸಿಗಳಾದ ಅಶ್ವತ್ಥಪ್ಪ ಹಾಗೂ ಇತರೆ ಮೂವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ, ಶುಕ್ರವಾರ ವಿಚಾರಣೆ ನಡೆಸಿತು. ಈ ವೇಳೆ ಸರಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ವರದಿ ಪರಿಶೀಲಿಸಿದ ಪೀಠ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತು.

ಪ್ರಕರಣದಲ್ಲಿ ಪ್ರತಿವಾದಿಗಳಾಗಿರುವ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕಾರ್ಯದರ್ಶಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕ, ತುಮಕೂರು ಜಿಲ್ಲಾಧಿಕಾರಿ, ಕೊರಟಗೆರೆ ತಹಶೀಲ್ದಾರ್ ಸೇರಿದಂತೆ ಎಲ್ಲ ಪ್ರತಿವಾದಿಗಳು ಕೂಡ ಸ್ಥಳದಲ್ಲಿ ಅಕ್ರಮ ಗಣಿಗಾರಿಕೆ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವ ಕುರಿತು ಅಷ್ಟೇ ಮಾಹಿತಿ ನೀಡಿದ್ದಾರೆ. 

4 ವಾಹನಗಳನ್ನು ಜಪ್ತಿ ಮಾಡಿರುವುದಾಗಿ ಮತ್ತು 45 ಸಾವಿರ ದಂಡ ವಿಧಿಸಿರುವುದಾಗಿ ಅಷ್ಟೇ ಹೇಳಿದ್ದಾರೆ. ಅಕ್ರಮ ಕಲ್ಲು ಗಣಿಗಾರಿಕೆ ನಡೆಸುವುದು ಕಳ್ಳತನಕ್ಕೆ ಸಮ. ಆದರೆ, ಅಕ್ರಮ ಗಣಿಗಾರಿಕೆ ನಡೆಸಿರುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಂಡ ಕುರಿತಂತೆ ದಾಖಲೆಗಳಲ್ಲಿ ಯಾವುದೇ ಮಾಹಿತಿ ಇಲ್ಲ. ಅಧಿಕಾರಿಗಳ ಇಂತಹ ಬೇಜವಾಬ್ದಾರಿ ನಡೆಯಿಂದಲೇ ಅಕ್ರಮಗಳು ನಡೆಯುತ್ತಿವೆ. ಅಕ್ರಮ ಗಣಿಗಾರಿಕೆ ನಡೆಸಿದವರ ವಿರುದ್ಧ ಎಫ್‍ಐಆರ್ ದಾಖಲಿಸಿಲ್ಲವೇಕೆ. ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿಲ್ಲವೇಕೆ ಎಂದು ಪ್ರಶ್ನಿಸಿತು.

ಅಲ್ಲದೇ, ಅಕ್ರಮ ಕಲ್ಲು ಗಣಿಗಾರಿಕೆ ನಡೆಸಿದವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ನಿರ್ದೇಶಿಸಿ, ವಿಚಾರಣೆಯನ್ನು ಡಿ.5ಕ್ಕೆ ಮುಂದೂಡಿತು. ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಕುರಿತು ವಿಚಾರಣೆ ನಡೆಸಿದ್ದ ಪೀಠ, ಸ್ಥಳೀಯ ತಹಶೀಲ್ದಾರ್ ಮೂರು ವಾರಗಳಲ್ಲಿ ಸ್ಥಳಕ್ಕೆ ಭೇಟಿ ನೀಡಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಕುರಿತು ಪರಿಶೀಲಿನೆ ನಡೆಸಬೇಕು. ಅಕ್ರಮ ಕಂಡು ಬಂದರೆ ಆ ಕುರಿತು ಜಿಲ್ಲಾಧಿಕಾರಿಗೆ ವರದಿ ಸಲ್ಲಿಸುವುದರ ಜತೆಗೆ ಅಕ್ರಮ ಗಣಿಗಾರಿಕೆ ನಡೆಸುತ್ತಿರುವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ಆ ಆದೇಶದ ಅನುಪಾಲನಾ ವರದಿಯನ್ನು 6 ವಾರಗಳಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು 2020ರ ಮಾರ್ಚ 18ರಂದು ಪೀಠ ನಿರ್ದೇಶಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News