ಮುಖ್ಯಮಂತ್ರಿ ಬದಲಾವಣೆ ಇಲ್ಲ: ಸಭಾಪತಿ ಬಸವರಾಜ ಹೊರಟ್ಟಿ
Update: 2021-11-13 17:48 IST
ಧಾರವಾಡ, ನ. 13: `ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಸದ್ಯಕ್ಕೆ ಇಲ್ಲ. ಬಸವರಾಜ ಬೊಮ್ಮಾಯಿ ಅವರು ಒಳ್ಳೆಯ ಕೆಲಸ ಮಾಡುತ್ತಿದ್ದು, ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ' ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಬಿಟ್ ಕಾಯಿನ್ ಪ್ರಕರಣದ ವಿಚಾರಣೆ ನಡೆದಿದೆ. ತಪ್ಪಿತಸ್ಥರು ಯಾರಿದ್ದಾರೆಯೋ ಅವರ ಮೇಲೆ ಕಾನೂನು ರೀತಿಯಲ್ಲಿ ಕ್ರಮ ಆಗಲಿದೆ. ಈ ಬಗ್ಗೆ ಸವಿಸ್ತಾರವಾದ ಚರ್ಚೆ ಆಗಲಿ. ಆದರೆ, ರಾಜಕಾರಣದಲ್ಲಿ ಬದಲಾವಣೆ ಆಗುವುದಿಲ್ಲ' ಎಂದು ನುಡಿದರು.
`ಬೊಮ್ಮಾಯಿ ಅವರು ಒಳ್ಳೆ ಕೆಲಸ ಮಾಡುತ್ತಿದ್ದಾರೆ. ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಉನ್ನತ ಸ್ಥಾನಕ್ಕೆ ಬಂದಿದ್ದಾರೆ. ಅವರು ಇನ್ನಷ್ಟು ದಿನ ಮುಂದುವರೆಯಲಿ ಎಂಬುದು ನಮ್ಮ ಆಶಯವಾಗಿದೆ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ ಎಂದು ಬಸವರಾಜ ಹೊರಟ್ಟಿ ಇದೇ ವೇಳೆ ಸ್ಪಷ್ಟಣೆ ನೀಡಿದರು.