×
Ad

ಮಕ್ಕಳನ್ನು ಬಾಲಕಾರ್ಮಿಕ ಪದ್ದತಿಯಿಂದ ಮುಕ್ತಗೊಳಿಸಲು ಸಮೀಕ್ಷೆ: ಉಡುಪಿ ಡಿಸಿ ಕೂರ್ಮಾರಾವ್

Update: 2021-11-14 20:01 IST

ಉಡುಪಿ, ಅ.14: ಉಡುಪಿ ಜಿಲ್ಲೆಯಲ್ಲಿ ಮಕ್ಕಳನ್ನು ಬಾಲ ಕಾರ್ಮಿಕ ಪದ್ದತಿ ಯಿಂದ ಮುಕ್ತಗೊಳಿಸಲು ಬಾಲ ಕಾರ್ಮಿಕರ ಕುರಿತು ಸಮೀಕ್ಷೆ ನಡೆಸಲಾಗುತ್ತಿದೆ. ಜನಜಾಗೃತಿಯಿಂದ ಮಾತ್ರ ಮಕ್ಕಳ ಮೇಲಿನ ಶೋಷಣೆಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ 1098, ವಿದ್ಯೋದಯ ಪಬ್ಲಿಕ್ ಸ್ಕೂಲ್‌ಗಳ ಸಹಯೋಗದಲ್ಲಿ ರವಿವಾರ ಸ್ಕೂಲ್‌ ನಲ್ಲಿ ನಡೆದ ಮಕ್ಕಳ ದಿನಾಚರಣೆ ಹಾಗೂ 75ನೆ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆಯ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡುತಿದ್ದರು.

ಸಾರ್ವಜನಿಕರು ಕಾನೂನುಗಳ ಕುರಿತು ಅರಿವು ಹೊಂದಿದ್ದು, ಮಕ್ಕಳ ಶೋಷಣೆ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣವೇ ಮಾಹಿತಿ ನೀಡಬೇಕು. ಇದರಿಂದ ಮಕ್ಕಳನ್ನು ಅಲ್ಲಿಂದ ರಕ್ಷಿಸಲು ಮತ್ತು ಅವರಿಗೆ ಸೂಕ್ತ ರಕ್ಷಣೆ ಹಾಗೂ ಪುರ್ನವಸತಿ ಒದಗಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಶೋಷಣೆ ಬಗ್ಗೆ ಮಾಹಿತಿ ನೀಡಿ: ಸಮಾರಂಭವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಜೆ.ಎನ್.ಸುಬ್ರಹ್ಮಣ್ಯ ಮಾತನಾಡಿ, ಬಾಲ ಕಾರ್ಮಿಕರು ಹಾಗೂ ಬಾಲ್ಯ ವಿವಾಹ ಸಹಿತ ಮಕ್ಕಳ ಮೇಲಿನ ಶೋಷಣೆಗಳ ಕುರಿತು ಸಾರ್ವಜನಿಕರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ ಹಾಗೂ ಸಂಬಂದಪಟ್ಟ ಇಲಾಖೆಗಳಿಗೆ ಕೂಡಲೇ ಮಾಹಿತಿ ನೀಡಬೇಕು. ಈ ಮೂಲಕ ಮಕ್ಕಳನ್ನು ಶೋಷಣೆಯಿಂದ ತಪ್ಪಿಸಲು ಸಾಧ್ಯವಾಗುತ್ತದೆ ಎಂದರು.

ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಬಾಲಕಿಯರ ಬಾಲ ಮಂದಿರದ ಮಕ್ಕಳಿಂದ ಬಾಲ್ಯ ವಿವಾಹ ತಡೆ, ಬಾಲ ಕಾರ್ಮಿಕ ತಡೆ, ಭಿಕ್ಷಾಟನೆ ತಡೆ ಕುರಿತು ಕಿರುನಾಟಕ ಪ್ರದರ್ಶನಗೊಂಡಿತು.

ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶೆ ಕಲ್ಪನಾ ಎರ್ಮಾಳ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೊನಾಲ್ಡ್ ಬಿ.ಪುರ್ಟಾಡೋ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎನ್.ಎಚ್.ನಾಗೂರ, ಕಾರ್ಮಿಕ ನಿರೀಕ್ಷಕ ಪ್ರವೀಣ್ ಕುಮಾರ್, ಮಕ್ಕಳ ಸಹಾಯವಾಣಿ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ ಉಪಸ್ಥಿತರಿದ್ದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್ ನಾಯ್ಕ ಸ್ವಾಗತಿಸಿದರು. ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ವಂದಿಸಿದರು. ಎನ್.ಆರ್.ಎಲ್.ಎಂನ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ ಕಾರ್ಯಕ್ರಮ ನಿರೂಪಿಸಿದರು.

2,35,623 ಮಂದಿಗೆ ಕಾನೂನು ಅರಿವು

ಜಿಲ್ಲೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಅ.2ರಿಂದ ನ.14ರವರೆಗೆ ಒಟ್ಟು 734 ಕಾನೂನು ಅರಿವು ಕಾರ್ಯ ಕ್ರಮಗಳನ್ನು ಆಯೋಜಿಸಿದ್ದು, 267 ಗ್ರಾಮಗಳ 44419 ಫಲಾನುಭವಿಗಳಿಗೆ ಕಾನೂನು ಅರಿವು ಮೂಡಿಸಲಾಗಿದೆಂದು ನ್ಯಾಯಾದೀಶ ಜೆ.ಎನ್.ಸುಬ್ರಹ್ಮಣ್ಯ ತಿಳಿಸಿದರು.

ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪೌರ ಕಾಮಿಕರು, ನ್ಯಾಯಾಲಯದ ಸಿಬ್ಬಂದಿಗಳು, ಪೊಲೀಸರ ಮೂಲಕ ಮನೆ ಮನೆ ಭೇಟಿ ಮೂಲಕ 2,35,623 ಮಂದಿಗೆ ದಿನನಿತ್ಯದಲ್ಲಿ ಅಗತ್ಯವಿರುವ ಕಾನೂನುಗಳ ಬಗ್ಗೆ ಅರಿವು ಮೂಡಿಸಲಾಗಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News