ಬಿಟ್ ಕಾಯಿನ್ ಆರೋಪಿ ಜೀವಕ್ಕೆ ಅಪಾಯ ಇದ್ದರೆ ಸರಕಾರ ರಕ್ಷಣೆ ಕೊಡಲಿ: ಕುಮಾರಸ್ವಾಮಿ

Update: 2021-11-16 11:34 GMT

ಬೆಂಗಳೂರು, ನ.16: ಬಿಟ್ ಕಾಯಿನ್ ವಿಚಾರದಲ್ಲಿ ಬರೀ ಗೊಂದಲ ಎಬ್ಬಿಸಲಾಗುತ್ತಿದೆ. ತನಿಖೆಯನ್ನು ಈಡಿಗೆ(ಜಾರಿ ನಿರ್ದೇಶನಾಲಯ) ಕೊಡಲಾಗಿದೆ ಅಂತಿದ್ದಾರೆ. ನಿಖರ ಮಾಹಿತಿ ಯಾರ ಬಳಿಯೂ ಇಲ್ಲ. ಮುಖ್ಯ ಆರೋಪಿಯನ್ನು ಏಳೆಂಟು ಬಾರಿ ಬಂಧನ ಮಾಡಿ ತನಿಖೆಗೆ ಒಳಪಡಿಸಲಾಗಿದೆ. ಸರಕಾರವು ಈ ಹಗರಣದ ಬಗ್ಗೆ ನುರಿತ ತಜ್ಞರ ಸಹಕಾರ ಪಡೆದು ತನಿಖೆ ನಡೆಸಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದರು.

ಮಂಗಳವಾರ ನಗರದಲ್ಲಿರುವ ಜೆಡಿಎಸ್ ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ಜೀವಕ್ಕೆ ಅಪಾಯ ಇದೆ. ಆತನಿಗೆ ಪೊಲೀಸ್ ರಕ್ಷಣೆ ಕೊಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯ ಮಾಡಿದ್ದರಲ್ಲಾ ಎಂದು ಗಮನ ಸೆಳೆದಾಗ, ಇಷ್ಟು ವರ್ಷ ಆತನ ಜೀವಕ್ಕೆ ಅಪಾಯ ಇರಲಿಲ್ಲ. ಈಗ ಅವನಿಗೆ ಜೀವ ಬೆದರಿಕೆ ಇದೆ ಎಂದರೆ ಹೇಗೆ? ಕಾಂಗ್ರೆಸ್ ಪಕ್ಷಕ್ಕೆ ಈ ಬಗ್ಗೆ ನಿಖರ ಮಾಹಿತಿ ಇರಬೇಕು ಎಂದರು.

ಶ್ರೀಕಿ ಜೀವಕ್ಕೆ ಅಪಾಯ ಇದ್ದರೆ ರಕ್ಷಣೆ ಕೊಡೋದು ತಪ್ಪಲ್ಲ, ಕೊಡಲಿ. ಇದುವರೆಗೆ ಎಂಥೆಂತವರಿಗೋ ರಕ್ಷಣೆ ನೀಡಲಾಗಿದೆ. ಇವರಿಗೂ ಕೊಡಲಿ, ಬೇಡ ಅಂದವರು ಯಾರು? ಎಂದು ಕುಮಾರಸ್ವಾಮಿ ಹೇಳಿದರು.

ಬಿಬಿಎಂಪಿ ಚುನಾವಣೆಗೆ ಸಿದ್ಧ: ಮುಂದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಹಾಗೂ 2023ರ ವಿಧಾನಸಭೆ ಚುನಾವಣೆಗೆ ರಾಜಧಾನಿಯ ಮುಖಂಡರು, ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ನಗರದಲ್ಲಿ ಜೆಡಿಎಸ್ ಸಂಘಟನಾ ಕಾರ್ಯಾಗಾರ ಜನತಾ ಸಂಗಮ ನಡೆಸಲಾಗುತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು.

ಬೆಂಗಳೂರು ನಗರಕ್ಕೆ ಜೆಡಿಎಸ್ ಪಕ್ಷವು ಅನೇಕ ಅಭಿವೃದ್ಧಿ ಯೋಜನೆಗಳನ್ನು ನೀಡಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಪಕ್ಷದ ಜವಾಬ್ದಾರಿ ಏನಿದೆ ಎಂಬ ಬಗ್ಗೆಯೂ ಇಂದಿನ ಕಾರ್ಯಾಗಾರದಲ್ಲಿ ಚರ್ಚೆ ನಡೆಸಲಾಗುವುದು. ಜತೆಗೆ, ಪಕ್ಷದ ಸಂಘಟನೆಯಲ್ಲಿ ಎಲ್ಲೆಲ್ಲಿ ಲೋಪ ಆಗಿದೆ ಎನ್ನುವುದನ್ನು ಚರ್ಚೆ ಮಾಡಿ ಸರಿಪಡಿಸಲಾಗುವುದು ಎಂದು ಅವರು ಹೇಳಿದರು.

ದೇವೇಗೌಡರು ಮುಖ್ಯಮಂತ್ರಿ, ಪ್ರಧಾನಿ ಆಗಿದ್ದಾಗ ಹಾಗೂ ನಾನು ಮುಖ್ಯಮಂತ್ರಿ ಆಗಿದ್ದಾಗ ಬೆಂಗಳೂರು ನಗರ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಕುಡಿಯುವ ನೀರು, ಐಟಿ ಬಿಟಿ, ಮೆಟ್ರೋ, ಮೂಲಸೌಕರ್ಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದರು.

ನಗರಕ್ಕೆ ಸಾಕಷ್ಟು ಕೆಲಸ ಮಾಡಿದ್ದಾಗ್ಯೂ ಆ ಬಗ್ಗೆ ಜನರಿಗೆ ಪೂರ್ಣ ಮಾಹಿತಿ ಇಲ್ಲ. ಪಕ್ಷದ ಸಾಧನೆಗಳನ್ನು ಜನತೆಗೆ ತಲುಪಿಸುವ ಕೆಲಸ ಮಾಡುವ ವಿಚಾರವಾಗಿ ಕಾರ್ಯಾಗಾರದಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.

ನಮ್ಮ ಪಕ್ಷವನ್ನು ಪಾಲಿಕೆ ಚುನಾವಣೆಗೆ ಸಜ್ಜು ಮಾಡುತ್ತಿದ್ದೇವೆ. ಫೆಬ್ರವರಿಯಲ್ಲಿ ಬಿಬಿಎಂಪಿ ಚುನಾವಣೆ ಎನ್ನುವ ಸುದ್ದಿ ಇದೆ. ಹೀಗಾಗಿ ಪಕ್ಷದ ಸಂಘಟನೆಗೆ ಹೆಚ್ಚು ಗಮನ ಕೊಡಲಾಗುತ್ತದೆ. ವಾರ್ಡ್ ವಿಂಗಡಣೆ ಕೆಲಸ ನಡೆಯುತ್ತಿದೆ. ನಗರದ ಏಳೆಂಟು ವಿಧಾನಸಭೆ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಉತ್ತಮ ಶಕ್ತಿ ಹೊಂದಿದೆ. ಉಳಿದ ಕ್ಷೇತ್ರಗಳಲ್ಲಿ ಬಲ ಹೆಚ್ಚಿಸಿಕೊಳ್ಳುವ ಬಗ್ಗೆಯೂ ಚರ್ಚೆ ಮಾಡುತ್ತಿದ್ದೇವೆ. ಅಲ್ಲದೆ, ಪಾಲಿಕೆ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡುತ್ತೇವೆ. ಆ ಮಾತನ್ನು ಈಗಾಗಲೇ ಹೇಳಿದ್ದೇವೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಟಿ.ಎ.ಶರವಣ, ಜೆಡಿಎಸ್ ನಗರ ಅಧ್ಯಕ್ಷ ಆರ್.ಪ್ರಕಾಶ್ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News