ಬಿ.ಇ., ಡಿಪ್ಲೊಮಾ ಇಂಟರ್ನ್ ಶಿಪ್: ಸ್ಥಾಯಿ ಸಮಿತಿ ರಚನೆ ; ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

Update: 2021-11-16 18:29 GMT

ಬೆಂಗಳೂರು: ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಕೈಗಾರಿಕೆಗಳಲ್ಲಿ ಇಂಟರ್ನ್-ಶಿಪ್ ಗೆ ಅವಕಾಶ ಕಲ್ಪಿಸುವ ಯೋಜನೆಯ ರೂಪುರೇಷೆಗಳನ್ನು ಸಿದ್ಧಪಡಿಸಲು ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಕುಲಪತಿ ಪ್ರೊ.ಕರಿಸಿದ್ದಪ್ಪ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. 

ಈ ಸಂಬಂಧ ಮಂಗಳವಾರ ಮಾತನಾಡಿದ ಅವರು, `ವಿದ್ಯಾರ್ಥಿಗಳಿಗೆ ಒಳ್ಳೆ ಉದ್ಯೋಗ ಸಿಗಬೇಕೆಂಬ ಹಿತದೃಷ್ಟಿಯಿಂದ ಈ ಯೋಜನೆ ಅನುಷ್ಠಾನಕ್ಕೆ ತರಲಾಗುತ್ತಿದೆ. ಸಮಿತಿಯು ಒಂದು ವಾರದಲ್ಲಿ ತನ್ನ ವರದಿ ನೀಡಲಿದೆ’ ಎಂದಿದ್ದಾರೆ. ಅ.22ರಂದು ನಡೆದ ಸಭೆಯಲ್ಲಿ ಈ ಸಮಿತಿ ರಚಿಸಲು ತೀರ್ಮಾನಿಸಲಾಗಿತ್ತು. ಆ ಪ್ರಕಾರ ಮಂಗಳವಾರ ಆದೇಶ ಹೊರಡಿಸಲಾಗಿದೆ. 

ಈ ಸಮಿತಿಯಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ. ಪ್ರದೀಪ್, ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲಕೃಷ್ಣ ಜೋಶಿ, ರಾಜ್ಯ ಸ್ಟಾರ್ಟಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಇ.ವೈ.ಇಂಡಿಯಾ ಕಂಪನಿಯ ಪಾಲುದಾರ ಸುರೇಶ್ ಅರಗಂಜಿ, ಬೆಳಗಾವಿ ವಿಟಿಯು ಕುಲಸಚಿವರು, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ನಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮತ್ತು ಐಟಿ-ಬಿಟಿ ಇಲಾಖೆಯ ನಿರ್ದೇಶಕರು ಸದಸ್ಯರಾಗಿರುತ್ತಾರೆ. 

ಇದೇ ರೀತಿ ಎಂಜಿನಿಯರಿಂಗ್ ಕಾಲೇಜುಗಳನ್ನು ಮೇಲ್ದರ್ಜೆಗೇರಿಸುವ ಸಂಬಂಧ ಸೂಪರ್- 30 ಪರಿಕಲ್ಪನೆಯಡಿ ಅಭಿವೃದ್ಧಿಪಡಿಸಲು ರೂಪುರೇಷೆ ರೂಪಿಸುವುದಕ್ಕೂ ವಿಟಿಯು ಕುಲಪತಿ ಕರಿಸಿದ್ದಪ್ಪ ಹೆಸರಿನಲ್ಲಿ ಮತ್ತೊಂದು ಸಮಿತಿ ರಚಿಸಲಾಗಿದೆ. ಈ ಸಮಿತಿ ವರದಿ ಕೊಟ್ಟ ನಂತರ ಸೂಪರ್ 30 ಕಾರ್ಯಕ್ರಮ ಜಾರಿಗೆ ತರಲಾಗುವುದು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News