×
Ad

ತಮ್ಮ ಭ್ರಷ್ಟಾಚಾರ ಮುಚ್ಚಿಹಾಕಲು ಅಗಲಿದ ನನ್ನ‌ ಮಗನ ಹೆಸರನ್ನು ಎಳೆದು ತಂದ ಬಿಜೆಪಿ: ಸಿದ್ದರಾಮಯ್ಯ

Update: 2021-11-18 17:26 IST

ಬೆಂಗಳೂರು: "ತಮ್ಮ ಭ್ರಷ್ಟಾಚಾರ ಮುಚ್ಚಿಹಾಕಲು ಬಿಜೆಪಿ ಪಕ್ಷವು ಅಗಲಿ ಹೋಗಿರುವ ನನ್ನ‌ ಮಗನ ಹೆಸರನ್ನು ಎಳೆದು ತಂದಿದೆ" ಎಂದು ತನ್ನ ಪುತ್ರನ ಪೋಟೋ ಟ್ವೀಟ್ ಮಾಡಿದ ಬಿಜೆಪಿಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಗುರುವಾರ ಸರಣಿ ಟ್ವೀಟ್ ಮಾಡಿದ ಅವರು, "ತಮ್ಮ ಭ್ರಷ್ಟಾಚಾರ ಮುಚ್ಚಿಹಾಕಲು ಬಿಜೆಪಿ ಪಕ್ಷ ಅಗಲಿ ಹೋಗಿರುವ ನನ್ನ‌ ಮಗನ ಹೆಸರನ್ನು ಎಳೆದು ತಂದಿದೆ. ಸರಿ.. ನಮ್ಮ ಸರ್ಕಾರದ ಅವಧಿಯನ್ನೂ ಸೇರಿಸಿ ಬಿಟ್ ಕಾಯಿನ್ ಹಗರಣವನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ‌ ನ್ಯಾಯಾಂಗ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ಅವರನ್ನು ಒತ್ತಾಯಿಸುತ್ತೇನೆ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

"ನನ್ನ ಮಗ ರಾಕೇಶ್ ನಮ್ಮನಗಲಿ ಐದು ವರ್ಷಗಳಾಗಿವೆ, ಪುತ್ರಶೋಕ ನಿರಂತರ. ತನ್ನ ಮೇಲಿನ ಆರೋಪಕ್ಕೆ ಆತ ಪ್ರತಿಕ್ರಿಯಿಸಲೂ ಸಾಧ್ಯವಿಲ್ಲ. ಇಂತಹ ಸಮಯದಲ್ಲಿ ಬಿಜೆಪಿ ಪಕ್ಷ ನನ್ನ ದಿವಂಗತ ಮಗನ ಹೆಸರನ್ನು ಎಳೆದು ರಾಜಕೀಯ ಮಾಡಲು ಹೊರಟಿರುವುದು 'ಅತ್ಯಂತ ವೈಯಕ್ತಿಕ‌ ಮತ್ತು ಕ್ಷುಲಕತನದ' ರಾಜಕಾರಣ" ಎಂದು ಅವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

"ರಾಕೇಶ್ ಜೊತೆಗೆ ಬಿಟ್‌ಕಾಯಿನ್ ಹಗರಣದ ಆರೋಪಿ ಶ್ರೀಕೃಷ್ಣನ ಗೆಳೆಯ ಹೇಮಂತ್ ಮುದ್ದಪ್ಪ ಇದ್ದಾನೆ ಎಂದು ಬಿಜೆಪಿ ಆರೋಪಿಸಿದೆ. ಹಾಗಿದ್ದರೆ 2018ರಲ್ಲಿ ದಾವೋಸ್ ನಲ್ಲಿ‌ ನಡೆದ ವಿಶ್ವ ಆರ್ಥಿಕ‌ ಶೃಂಗ ಸಭೆಯಲ್ಲಿ‌ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗಿರುವ ಬ್ಯಾಂಕ್ ಲೂಟಿಕೋರ ನೀರವ್ ಮೋದಿಯ ಪೋಟೊವನ್ನು ಹೇಗೆ ವ್ಯಾಖ್ಯಾನಿಸುವುದು?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

"ಶ್ರೀಕೃಷ್ಣನ ಜೊತೆ ಬಂಧನಕ್ಕೊಳಗಾದ ಹೇಮಂತ್ ಮುದ್ದಪ್ಪನ ಬಿಡುಗಡೆಗಾಗಿ ಪೊಲೀಸರ ಜೊತೆ ಬಿಜೆಪಿಯ ಪ್ರಮುಖ ನಾಯಕರೊಬ್ಬರು ಸಂಧಾನ ಮಾಡಿದ್ದು, ಆ ಸೇವೆಗಾಗಿ ಆರೋಪಿಯಿಂದ ಆ ಬಿಜೆಪಿ ನಾಯಕ ಬಿಟ್ ಕಾಯಿನ್ ಪಡೆದಿದ್ದ ಎಂಬ ಆರೋಪ ಇದೆ. ಆ ನಾಯಕ ಯಾರೆಂದು‌ ನಳಿನ್ ಕುಮಾರ್ ಕಟೀಲ್ ಅವರಿಗೆ ಗೊತ್ತಿರಬಹುದೇನೋ?" ಅವರು ಹೇಳಿದ್ದಾರೆ. 

"ನನ್ನ ಕೈಯಲ್ಲಿ ಪುರಾವೆಗಳಿಲ್ಲದ ಕಾರಣ ನಾನು ಇಲ್ಲಿಯ ವರೆಗೆ ಯಾರ ವಿರುದ್ಧವೂ ನೇರ ಆರೋಪ ಮಾಡಿಲ್ಲ. ಬಿಜೆಪಿ ಸರ್ಕಾರವೇ ಸಲ್ಲಿಸಿರುವ ಆರೋಪ‌ ಪಟ್ಟಿಯಲ್ಲಿರುವ ವಿಷಯವನ್ನಷ್ಟೇ ಹೇಳುತ್ತಿದ್ದೇನೆ. ಈ ವರೆಗಿನ ಪೊಲೀಸರ ತನಿಖೆ ಯಾರೋ ಪ್ರಭಾವಿಗಳನ್ನು ರಕ್ಷಿಸಲು ನಡೆಸಿರುವ ನಾಟಕದಂತಿದೆ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

"ನಮ್ಮ ಬುಟ್ಟಿಯಲ್ಲಿ ಹಾವು ಇಲ್ಲ‌ ಎಂದಾದರೆ ಬಿಜೆಪಿ ನಾಯಕರು ಯಾಕೆ ಹಾವು ಕಂಡ ಹಾಗೆ ಬೆಚ್ಚಿ ಬೀಳುತ್ತಿದ್ದಾರೆ? ಯಾಕೆ ಸರತಿ‌ ಸಾಲಲ್ಲಿ ನಿಂತು ಹೆಗಲು‌ ಮುಟ್ಟಿ ನೋಡಿಕೊಂಡು 'ಸರ್ಕಾರ ತಪ್ಪು‌ ಮಾಡಿಲ್ಲ, ನಾವೆಲ್ಲ ನಿರಪರಾಧಿಗಳು' ಎಂದು ಎದೆ ಬಡಿದು ಕೊಳ್ಳುತ್ತಿದ್ದಾರೆ?" ಎಂದು ಅವರು ಪ್ರಶ್ನಿಸಿದ್ದಾರೆ.

ಬಿಟ್ ಕಾಯಿನ್ ಹಗರಣದಲ್ಲಿ‌ ಬಿಜೆಪಿ ನಾಯಕರ ಮಕ್ಕಳ ಹೆಸರೂ ಕೇಳಿ ಬರುತ್ತಿವೆ. ಪುರಾವೆಗಳಿಲ್ಲದೆ‌ ಕುಟುಂಬದ ಸದಸ್ಯರ ಹೆಸರು ಎಳೆದು ತರಬಾರದೆಂದು ಸುಮ್ಮನಿದ್ದೇನೆ. ಬಿಜೆಪಿ ನಾಯಕರು ಜೇನು ಗೂಡಿಗೆ ಕಲ್ಲೆಸೆಯುತ್ತಿದ್ದಾರೆ. ಕೆರಳಿದ ಜೇನು ನೊಣಗಳು ಯಾರಿಗೆಲ್ಲ‌ ಕಚ್ಚಲಿದೆಯೋ ಗೊತ್ತಿಲ್ಲ ಎಂದು ಅವರು ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News