ಬೆಳೆಹಾನಿಗೆ ಶೀಘ್ರವೇ ಪರಿಹಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Update: 2021-11-18 12:32 GMT

ಬೆಂಗಳೂರು, ನ. 18: ರಾಜ್ಯದಲ್ಲಿ ಬೆಳೆ ಹಾನಿಗೆ ಪರಿಹಾರ ನೀಡುವ ಸಂಬಂಧ ಈಗಾಗಲೇ ಹಾನಿ ಕುರಿತು ಸಮೀಕ್ಷೆ ವರದಿ ತರಿಸಿಕೊಂಡು ಬೆಳೆ ಪರಿಹಾರ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ನಷ್ಟಕ್ಕೆ ಒಳಗಾಗಿರುವ ಜನರಿಗೆ ತ್ವರಿತಗತಿಯಲ್ಲಿ ಪರಿಹಾರ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಗುರುವಾರ ಇಲ್ಲಿನ ಖಾಸಗಿ ಹೊಟೇಲ್‌ನಲ್ಲಿ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಮಹಿಳಾ ಉದ್ಯಮಿಗಳ ದಿನಾಚರಣೆ ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, `ವಿಧಾನ ಪರಿಷತ್ ಚುನಾವಣೆಗೆ ಪೂರ್ವತಯಾರಿ ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆಯ ಉದ್ದೇಶದಿಂದ ಹಮ್ಮಿಕೊಂಡಿರುವ ಬಿಜೆಪಿ `ಜನಸ್ವರಾಜ್ ಯಾತ್ರೆ'ಗೆ ಚಾಲನೆ ನೀಡಲಾಗಿದೆ' ಎಂದು ತಿಳಿಸಿದರು.

ಬಿಜೆಪಿಯ ಜನ ಸ್ವರಾಜ್ ಕಾರ್ಯಕ್ರಮಕ್ಕಾಗಿ ಕೊಪ್ಪಳ ಪ್ರವಾಸವನ್ನು ಇಂದು ಕೈಗೊಳ್ಳುತ್ತಿದ್ದೇನೆ. ಪಕ್ಷದ ಹಿರಿಯ ನಾಯಕರು ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ನಾಲ್ಕು ತಂಡಗಳು ರಾಜ್ಯಾದ್ಯಂತ ಪ್ರವಾಸ ಮಾಡಲಿದೆ. ಅಲ್ಲಿನ ಚುನಾಯಿತ ಪ್ರತಿನಿಧಿಗಳನ್ನು ಭೇಟಿ ಮಾಡಿ ಮುಂಬರುವ ಪರಿಷತ್ತಿನ ಚುನಾವಣೆಗೆ ಮತದಾರರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚಿಸಲಾಗುವುದು. ನ.22ನೆ ತಾರೀಖಿನಂದು ಮಡಿಕೇರಿಯಲ್ಲಿ ಈ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಲಿದೆ ಎಂದರು.

ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಈಗಾಗಲೇ 2 ಜಿಲ್ಲೆಗಳನ್ನು ಹೊರತುಪಡಿಸಿ ಇನ್ನುಳಿದ ಅಭ್ಯರ್ಥಿಗಳ ಪಟ್ಟಿಯನ್ನು ವರಿಷ್ಠರಿಗೆ ಕಳುಹಿಸಲಾಗಿದೆ. ಇಂದು ಸಂಜೆ ಅಂತಿಮ ಪಟ್ಟಿ ಅನುಮೋದನೆಯಾಗುವ ಸಾಧ್ಯತೆ ಇದೆ ಎಂದು ಬಸವರಾಜ ಬೊಮ್ಮಾಯಿ ಸ್ಪಷ್ಟಣೆ ನೀಡಿದರು.

ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಯಾನೆ ಶ್ರೀಕಿ ನಾಪತ್ತೆಯಾಗಿದ್ದಾರೆಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಡಿಮಿಡಿಗೊಂಡರು. ಪೊಲೀಸರು ತನಿಖೆ ನಡೆಸುತ್ತಿದ್ದು ಆ ಬಳಿಕ ಆತನ ಬಗ್ಗೆ ಗೊತ್ತಾಗಲಿದೆ ಎಂದು ಸ್ಪಷ್ಟಣೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News