ಕೃಷಿ ಕಾಯ್ದೆಯನ್ನು ಹಿಂಪಡೆದಿರುವುದು ನಮಗೆ ಸಂಪೂರ್ಣ ತೃಪ್ತಿಯಿಲ್ಲ: ಬಡಗಲಪುರ ನಾಗೇಂದ್ರ

Update: 2021-11-19 15:02 GMT

ಮೈಸೂರು,ನ.19: ಮೂರು ಕೃಷಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿರುವುದು ನಮಗೆ ಸಂಪೂರ್ಣ ತೃಪ್ತಿಯಿಲ್ಲ, ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರೈತರಿಗೆ ವಿರೋಧವಾಗಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಒಂದು ವರ್ಷದಿಂದ ದೆಹಲಿಯಲ್ಲಿ ಹೋರಾಟ ನಡೆಸಲಾಗುತ್ತಿತ್ತು. ಇದಕ್ಕೆ ಮಣಿದ ಕೇಂದ್ರ ಸರ್ಕಾರ ಕೃಷಿ ಮಸೂದೆ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಹೇಳಿದೆ. ಇದರಿಂದ ನಮಗೆ ಸಂಪೂರ್ಣ ತೃಪ್ತಿಯಾಗಿಲ್ಲ, ಜನ ಸಾಮಾನ್ಯರಿಗೆ ಹೊರೆಯಾಗಿರುವ ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ಇನ್ನಿತರೆ ಹೊರೆಗಳನ್ನು ಹಿಂಪಡೆಯಬೇಕು, ಜನರಿಗೆ ಅನುಕೂಲವಾಗುವ ಎಂಎಸ್‍ಪಿ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರ ಕೃಷಿ ಕಾಯ್ದೆ ಹಿಂಪಡೆದ ಜೊತೆಗೆ ವಿದ್ಯುತ್ ಕಾಯ್ದೆಯನ್ನು ಹಿಂಪಡೆಯಬೇಕು, ರಾಜ್ಯ ಸರ್ಕಾರ ಕೂಡ ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ ಮತ್ತು ಜಾನುವಾರು ನಿಷೇಧ ಕಾಯ್ದೆಯನ್ಜು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ರೈತರ ಹೋರಾಟಕ್ಕೆ ಜಯ ಸಿಕ್ಕಿರುವುದು ಸಂತಸ ತಂದಿದೆ. ಹೋರಾಟದಲ್ಲಿ ಪಾಲ್ಗೊಂಡ ಎಲ್ಲರಿಗೂ ಹೃದಯ ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇವೆ. ಹೋರಾಟದಲ್ಲಿ ಭಾಗವಹಿಸಿ 679 ಮಂದಿ ಹುತಾತ್ಮರಾಗಿದ್ದಾರೆ. ರೈತರ ಹೋರಾಟವನ್ನು ಹತ್ತಿಕ್ಕಲು ಗೂಂಡಾಗಳನ್ನು ಬಿಟ್ಟು ಹಲ್ಲೆ ನಡೆಸಿದರು. ರಸ್ತೆಗಳನ್ನು ಅಗೆಸಿ ಇನ್ನಿತರ ತೊಂದರೆಗಳನ್ನು ನೀಡಿದರು. ಆದರೂ ಯಾವುದಕ್ಕೂ ಎದೆಗುಂದದೆ ಹೋರಾಟವನ್ನು ಮುಂದುವರೆಸಿಕೊಂಡು ಬಂದೆವು ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಬರೀ ಬಾಯಿ ಮಾತಿನಿಂದ ಹೇಳಿದರೆ ಸಾಲದು ಪಾರ್ಲಿಮೆಂಟ್‍ನಲ್ಲಿ ಇದನ್ನು ಅಂಗೀಕರಿಸಿ ನಿರ್ಣಯ ಕೈಗೊಳ್ಳಬೇಕು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಹೊಸಕೋಟೆ ಬಸವರಾಜು, ಪ್ರಸನ್ನ ಎನ್.ಗೌಡ, ಜಯಸೂರ್ಯ, ಚಂದ್ರಶೇಖರ ಮೇಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News