ಜಿಲ್ಲೆಗಳಿಗೆ ಕೋವಿಡ್‌ ಉಸ್ತುವಾರಿಗಳೆಂದು ನೇಮಕವಾದ ಸಚಿವರು ಎಲ್ಲಿ?: ಕುಮಾರಸ್ವಾಮಿ ಪ್ರಶ್ನೆ

Update: 2021-11-20 04:41 GMT

ಬೆಂಗಳೂರು: 'ಕೋವಿಡ್‌ ಮಹಾಮಾರಿಯಿಂದ ತತ್ತರಿಸಿದ್ದ ಜನ ಈಗ ಮಳೆಯಿಂದ ಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ಅವರು ಬದುಕು ಕಟ್ಟಿಕೊಳ್ಳುವ ಮುನ್ನವೇ ಮಳೆ ಸಂಕಷ್ಟಕ್ಕೀಡು ಮಾಡಿದೆ. ಬೆಳೆದ ಬೆಳೆ ಕಣ್ಮುಂದೆಯೇ ಕೊಚ್ಚಿಹೋಗುತ್ತಿದೆ. ನಾಡಿಗೆ ಅನ್ನ ಕೊಡುವ ಅನ್ನದಾತ ಆಪತ್ತಿನಲ್ಲಿದ್ದಾನೆ' ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. 

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು, 'ಜಿಲ್ಲೆಗಳಿಗೆ ಕೋವಿಡ್‌ ಉಸ್ತುವಾರಿಗಳೆಂದು ನೇಮಕವಾದ ಸಚಿವರು ಎಲ್ಲಿ? ಅನೇಕ ಸಚಿವರಂತೂ ಜಿಲ್ಲೆಗಳ ಕಥೆ ಹಾಗಿರಲಿ, ಅವರ ಕಚೇರಿಗಳಲ್ಲೇ ಪತ್ತೆ ಇಲ್ಲ. ಮುಖ್ಯಮಂತ್ರಿಗಳು ಕೂಡಲೇ ಸಚಿವರನ್ನು ಜಿಲ್ಲೆಗಳಿಗೆ ಅಟ್ಟಬೇಕು. ಮಳೆ-ಬೆಳೆ ಪರಿಹಾರ ಕಾರ್ಯಕ್ರಮಗಳನ್ನು ತುರ್ತಾಗಿ ಕೈಗೆತ್ತಿಕೊಳ್ಳುವಂತೆ ನಿರ್ದೇಶನ ನೀಡಬೇಕು' ಎಂದು ಒತ್ತಾಯಿಸಿದ್ದಾರೆ.

'ಇಷ್ಟೆಲ್ಲ ಅನಾಹುತ ಆಗುತ್ತಿದ್ದರೂ ಕೃಷಿ ಸಚಿವರು, ಅವರ ಇಲಾಖೆ ಹಾಗೂ ಕಂದಾಯ ಇಲಾಖೆ ಏನು ಮಾಡುತ್ತಿದೆ? ಈಗಾಗಲೇ ಬೆಳೆ ಹಾನಿ ಬಗ್ಗೆ ಸಮೀಕ್ಷೆ ಮಾಡಲಾಗಿದೆಯಾ? ಬೆಳೆ ವಿಮೆ ಪರಿಸ್ಥಿತಿ ಏನು? ಕಾಟಾಚಾರಕ್ಕೆ ಸರ್ವೇ ಮಾಡಿ ಸಭೆಗಳಲ್ಲಿ ಕಾಲಹರಣ ಮಾಡುವುದು ಬೇಡ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ಮಾಧ್ಯಮಗಳಿಗೆ ಅಧಿಕಾರಿಗಳೇ ನೀಡಿರುವ ಮಾಹಿತಿಯಂತೆ ಜುಲೈ-ನವೆಂಬರ್‌ʼನಲ್ಲಿ 7.31 ಲಕ್ಷ ಹೆಕ್ಟೇರ್‌ ಅಥವಾ ಅದಕ್ಕಿಂತ ಹೆಚ್ಚು ಪ್ರದೇಶದಲ್ಲಿ ಬೆಳೆದ ಬೆಳೆ ಮಳೆ ಪಾಲಾಗಿದೆ. ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು, ಮಧ್ಯ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆ ಸೇರಿ ರಾಜ್ಯದ ಉದ್ದಗಲಕ್ಕೂ ಮಳೆಯ ರುದ್ರನರ್ತನ ಮುಂದುವರಿದೆ' ಎಂದು ಹೇಳಿದ್ದಾರೆ.

'ಸಾವಿರಾರು ಕೋಟಿ ರೂ. ಮೌಲ್ಯದ ಬೆಳೆ ನಾಶವಾಗಿದೆ. ಚಿಕ್ಕಮಗಳೂರು, ಕೊಡಗಿನಲ್ಲಿ ಕಾಫಿ ತೋಟಗಳು ಪೂರ್ಣ ನಾಶವಾಗಿವೆ. ಬಯಲುಸೀಮೆ ಜಿಲ್ಲೆಗಳಲ್ಲಿ ಮಳೆ ಪ್ರಳಯವನ್ನೇ ಸೃಷ್ಟಿಸಿದೆ. ಕೆರೆಕಟ್ಟೆಗಳು ಒಡೆದುಹೋಗಿ ಗ್ರಾಮಗಳಿಗೆ ಸಂಪರ್ಕವೇ ತಪ್ಪಿಹೋಗಿದೆ. ಹಳ್ಳಿಗಳು ನಡುಗಡ್ಡೆಗಳಾಗಿವೆ. ತೋಟಗಳು ಕೆರೆಗಳಾಗಿವೆ'.

'ಕೋಲಾರ ಜಿಲ್ಲೆ ಒಂದರಲ್ಲೇ ಅತಿ ಹೆಚ್ಚು ಬೆಳೆ ನಾಶವಾಗಿದೆ. ಮಾಧ್ಯಮಗಳಿಗೆ ಅಧಿಕಾರಿಗಳೇ ಕೊಟ್ಟಿರುವ  ಮಾಹಿತಿಯಂತೆ ಆ ಒಂದು ಜಿಲ್ಲೆಯಲ್ಲೇ 34,447 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದಿದ್ದ ಬೆಳೆಯನ್ನು ಮಳೆ ನುಂಗಿದೆ. 14 ಜಿಲ್ಲೆಗಳಲ್ಲಿ 48,000 ಹೆಕ್ಟೇರ್‌ʼಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಫಸಲು ರೈತರ ಕೈಗೆ ಸಿಕ್ಕಿಲ್ಲ' ಎಂದು ತಿಳಿಸಿದ್ದಾರೆ.


 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News