ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆಯಲ್ಲಿ ಮೃತಪಟ್ಟ 750 ರೈತರ ಕುಟುಂಬಕ್ಕೆ ತಲಾ 3 ಲಕ್ಷ ರೂ. ಪರಿಹಾರ

Update: 2021-11-20 17:37 GMT
PHOTO: twitter@TelanganaCMO

ಹೈದರಾಬಾದ್, ನ. 20: ಕೇಂದ್ರ ಸರಕಾರದ ಕೃಷಿ ಕಾಯ್ದೆಗಳ ವಿರುದ್ಧ ದಿಲ್ಲಿ ಗಡಿಗಳಲ್ಲಿ ಪ್ರತಿಭಟನೆ ನಡೆದ ಸಂದರ್ಭ ಸಾವನ್ನಪ್ಪಿದ 750 ರೈತರ ಕುಟುಂಬಗಳಿಗೆ ತೆಲಂಗಾಣ ಸರಕಾರ ಶನಿವಾರ ತಲಾ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಒಂದು ವರ್ಷ ದೀರ್ಘ ಕಾಲ ನಡೆದ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸುವಂತೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. 

ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಒಂದು ದಿನದ ಬಳಿಕ ರಾವ್ ಅವರು ಈ ಪರಿಹಾರ ಘೋಷಣೆ ಮಾಡಿದ್ದಾರೆ. 
‘‘ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿ ಪ್ರಾಣ ಕಳೆದುಕೊಂಡ ಎಲ್ಲ 750 ರೈತರ ಕುಟುಂಬಕ್ಕೆ ತಲಾ 3 ಲಕ್ಷ ರೂಪಾಯಿ ಪರಿಹಾರವನ್ನು ತೆಲಂಗಾಣದ ಗೌರವಾನ್ವಿತ ಮುಖ್ಯಮಂತ್ರಿ ಕೆಸಿಆರ್ ಘೋಷಿಸಿರುವುದು ಹೆಮ್ಮೆಯ ವಿಚಾರ. ಮೃತಪಟ್ಟ ರೈತರ ಕುಟುಂಬಗಳಿಗೆ ಕೇಂದ್ರ ಸರಕಾರ ತಲಾ 25 ಲಕ್ಷ ಪರಿಹಾರ ಘೋಷಿಸುವಂತೆ ಹಾಗೂ ರೈತರ ವಿರುದ್ಧ ದಾಖಲಿಸಲಾದ ಪ್ರಕರಣಗಳನ್ನು ನಿಶ್ಯರ್ತವಾಗಿ ಹಿಂಪಡೆಯುವಂತೆ ಕೂಡ ಅವರು ಆಗ್ರಹಿಸಿದ್ದಾರೆ’’ ಎಂದು ಮುಖ್ಯಮಂತ್ರಿ ಕೆಸಿಆರ್ ಅವರ ಪುತ್ರ, ಸಹಾಯಕ ಸಚಿವ ಕೆ.ಟಿ. ರಾಮರಾವ್ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News