×
Ad

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದುವರಿದ ಮಳೆ: ಜನಜೀವನ ಅಸ್ತವ್ಯಸ್ತ

Update: 2021-11-21 20:09 IST

ಬೆಂಗಳೂರು, ನ. 21: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಎಂಟರಿಂದ ಹತ್ತು ದಿನಗಳಿಂದ ಎಡಬಿಡದೆ ಸುರಿಯುತ್ತಿದ್ದ ಜಿಟಿಜಿಟಿ ಮಳೆ, ರವಿವಾರದ ರಜೆಗೆ ಕೊಂಚ ಬಿಡುವು ನೀಡಲಿದೆ ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ ನಿರಾಸೆ ಮೂಡಿಸಿತು. ರಾಜಧಾನಿ ಬೆಂಗಳೂರು, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಕಾಲಿಕ ಮಳೆ ಬಿದ್ದ ಪರಿಣಾಮ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಯಿತು.

ರಾಜ್ಯದ ದಕ್ಷಿಣ ಒಳನಾಡು ಹಾಗೂ ತಮಿಳುನಾಡಿನ ಒಳನಾಡಿನಲ್ಲಿದ್ದ ವಾಯುಭಾರ ಕುಸಿತ ದುರ್ಬಲಗೊಂಡಿದ್ದು, ಮೇಲ್ಮೈ ಸುಳಿಗಾಳಿ ಸಕ್ರಿಯವಾಗಿದ್ದು, ಇದರಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಬಿದ್ದ ಪರಿಣಾಮ ಬೆಂಗಳೂರಿನ ಬಹುತೇಕ ರಸ್ತೆಗಳಲ್ಲಿ ಮಳೆ ನೀರು ಹರಿದ ಪರಿಣಾಮ ಸಾರ್ವಜನಿಕ ಪ್ರಯಾಣಿಕರು ಹಾಗೂ ದ್ವಿಚಕ್ರ ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದರು.

ಕರಾವಳಿ ಜಿಲ್ಲೆಗಳು, ಪಶ್ಚಿಮ ಘಟ್ಟದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಹಾಗೂ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಲ್ಲಿ ಇನ್ನೂ ಎರಡು ದಿನಗ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿದ್ದು, ಯಲ್ಲೊ ಅಲರ್ಟ್ ನೀಡಲಾಗಿದೆ. ಮೇಲ್ಮೈ ಸುಳಿಗಾಳಿಯ ತೀವ್ರತೆ ತಗ್ಗಲಿರುವುದರಿಂದ ಮುಂದಿನ ಎರಡು ದಿನಗಳ ವರೆಗೆ ರಾಜ್ಯದ ಕೆಲವೇ ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆ ಮುಂದುವರಿಯಲಿದೆ. ನ.23ರಿಂದ ಉತ್ತರ ಒಳನಾಡಿನಲ್ಲಿ ಮಳೆ ತಗ್ಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

ಸಿಎಂ ತುರ್ತು ಸಭೆ: ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭತ್ತ, ರಾಗಿ, ಶೇಂಗಾ ಸೇರಿದಂತೆ ವಿವಿಧ ಬೆಳೆಗಳು ಸಂಪೂರ್ಣ ಹಾನಿಯಾಗಿದೆ. ಕೆಲ ಜಿಲ್ಲೆಗಳ ರಸ್ತೆ, ಸೇತುವೆಗಳ ಹಾನಿಯಾಗಿದ್ದರೆ ಕೆಲ ಗ್ರಾಮಗಳು ಸಂಪರ್ಕ ಕಡಿದುಕೊಂಡಿದ್ದು, ನಡುಗಡ್ಡೆಯಂತಾಗಿವೆ. ಆ ಹಿನ್ನೆಲೆಯಲ್ಲಿ ಮಳೆಯಿಂದ ಉಂಟಾದ ಹಾನಿ ಕುರಿತು ಸಿಎಂ ಬೊಮ್ಮಾಯಿ ಅವರು ಗೃಹ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ, ಕೃಷಿ, ಸಣ್ಣ ನೀರಾವರಿ, ವಸತಿ ಸೇರಿದಂತೆ ವಿವಿಧ ಇಲಾಖೆ ಮುಖಸ್ಥರೊಂದಿಗೆ ಸಮಾಲೋಚನೆ ನಡೆಸಿದರು.

ಆ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಂದಾಯ ಸಚಿವ ಆರ್.ಅಶೋಕ್, ಆರೋಗ್ಯ ಸಚಿವ ಡಾ.ಸುಧಾಕರ್, ಸಂಸದ ಮುನಿಸ್ವಾಮಿ ಅವರೊಂದಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಅನೆಮೊಡಗು ಗ್ರಾಮದಲ್ಲಿ ಮಳೆಯಿಂದ ಕೆರೆ ತುಂಬಿ ಕೊಡಿಬಿದ್ದು ಹಾನಿಗೀಡಾದ ಪ್ರದೇಶಗಳಿಗೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿದರು. ಅಲ್ಲದೆ, ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.

`ಮಳೆಯಿಂದ ಮನೆಯಲ್ಲಿ ನೀರು ನಿಂತಿದ್ದವರಿಗೆ ನಿತ್ಯದ ಜೀವನಕ್ಕೆ ಕೂಡಲೇ ಕೂಡಲೇ 10 ಸಾವಿರ ರೂ., ಸಂಪೂರ್ಣ ಮನೆ ಬಿದ್ದವರಿಗೆ ತಕ್ಷಣವೇ 95 ಸಾವಿರ ರೂ. ನೀಡಲು ಸೂಚನೆ ನೀಡಲಾಗಿದೆ. ಸಂಪೂರ್ಣ ಮನೆ ಬಿದ್ದವರಿಗೆ 5ಲಕ್ಷ ರೂ., ಶೇ.50ಕ್ಕೂ ಹೆಚ್ಚು ಹಾನಿಯಾದವರಿಗೆ 3ಲಕ್ಷ ಹಾಗೂ ಭಾಗಶಃ ಹಾನಿಯಾದ ಮನೆಗಳಿಗೆ 50 ಸಾವಿರ ರೂ.ಪರಿಹಾರ ನೀಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ'

-ಬಸವರಾಜ ರಾಜ್ಯದಲ್ಲಿ ಮುಂದುವರಿದ ಮಳೆ; ಜನಜೀವನ ಅಸ್ತವ್ಯಸ್ತ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News