×
Ad

ಪತ್ರಕರ್ತನ ಮೇಲೆ ಹಲ್ಲೆ: ಕ್ರಮಕ್ಕೆ ಒತ್ತಾಯಿಸಿ ದ.ಕ. ಪತ್ರಕರ್ತರ ಸಂಘದಿಂದ ಪೊಲೀಸ್ ಆಯುಕ್ತರಿಗೆ ಮನವಿ

Update: 2021-11-23 17:18 IST

ಮಂಗಳೂರು, ನ. 23: ಖಾಸಗಿ ಟಿವಿ ವಾಹನಿಯೊಂದರ ಪತ್ರಕರ್ತರ ಮೇಲೆ ನಿನ್ನೆ ನಡೆದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಇಂದು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಈ ರೀತಿಯ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮನವಿ ಪತ್ರವನ್ನು ಪತ್ರಕರ್ತರ ನಿಯೋಗವು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರಿಗೆ ಸಲ್ಲಿಸಿತು.

ಹಲ್ಲೆಗೆ ಸಂಬಂಧಿಸಿ ಪೊಲೀಸರು ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದ್ದು, ಮನವಿಗೆ ಸ್ಪಂದಿಸಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಈ ಬಗ್ಗೆ ಪ್ರತಿ ದೂರು ಕೂಡಾ ಠಾಣೆಗೆ ಸಲ್ಲಿಕೆಯಾಗಿದೆ ಎಂದರು.

ಮನವಿ ಸಲ್ಲಿಸಿದ ನಿಯೋಗದಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ, ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ, ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಸದಸ್ಯ ಜಗನ್ನಾಥ ಶೆಟ್ಟಿ ಸೇರಿದಂತೆ ಇತರ ಪದಾಧಿಕಾರಿಗಳು, ಪತ್ರಕರ್ತರು ಈ ಸಂದರ್ಭ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News