ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ನಡೆದ ಸಂವಿಧಾನ ದಿನದ ಕಾರ್ಯಕ್ರಮ ಬಹಿಷ್ಕರಿಸಿದ ವಿಪಕ್ಷಗಳು

Update: 2021-11-26 06:37 GMT

ಹೊಸದಿಲ್ಲಿ: ಕಾಂಗ್ರೆಸ್ ಹಾಗೂ  ತೃಣಮೂಲ ಕಾಂಗ್ರೆಸ್ ಸೇರಿದಂತೆ 14 ವಿರೋಧ ಪಕ್ಷಗಳು ಇಂದು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಹಾಗೂ  ವಿಜ್ಞಾನ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಬಹಿಷ್ಕರಿಸಿವೆ. ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್‌ನ ಮಾಣಿಕಂ ಟ್ಯಾಗೋರ್, ‘ಈ ಸರಕಾರ ಸಂವಿಧಾನವನ್ನು ಗೌರವಿಸುವುದಿಲ್ಲ’ ಎಂದು ಹೇಳಿದರು.

ನಿನ್ನೆ ನಡೆದ ಕಾರ್ಯತಂತ್ರ ಸಭೆಯ ನಂತರ ಕಾಂಗ್ರೆಸ್ ಸಂಸದ ಮಲ್ಲಿಕಾರ್ಜುನ ಖರ್ಗೆ ವಿರೋಧ ಪಕ್ಷದ ನಾಯಕರ ಜೊತೆ ಮಾತನಾಡಿದರು. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಎಲ್ಲಾ 14 ವಿರೋಧ ಪಕ್ಷಗಳು ಒಗ್ಗಟ್ಟಾಗಿ ನಿಲ್ಲಲಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ನಿಮ್ಮ ಪಕ್ಷವು ಸಂವಿಧಾನ ದಿನಾಚರಣೆ ಕಾರ್ಯಕ್ರಮಗಳಿಗೆ ಹಾಜರಾಗುತ್ತದೆಯೇ ಎಂದು ಕೇಳಿದಾಗ- "ನಮ್ಮ ಪಕ್ಷದ ಸಂಸದರು ಸಮಾರಂಭದಲ್ಲಿ ಭಾಗವಹಿಸುವುದಿಲ್ಲ... ಪ್ರತಿಪಕ್ಷಗಳು ಒಗ್ಗಟ್ಟಾಗಿವೆ" ಎಂದು ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ಪ್ರತಿಕ್ರಿಯಿಸಿದರು.

ಸೋಮವಾರ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ಮುನ್ನ ಶಿವಸೇನೆ, ಎನ್‌ಸಿಪಿ, ಡಿಎಂಕೆ, ಆರ್‌ಜೆಡಿ ಹಾಗೂ ಎಡಪಕ್ಷಗಳು  ಕೂಡ ಇಂದಿನ ಪ್ರಮುಖ ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ.

ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಎನ್‌ಡಿಟಿವಿಯೊಂದಿಗೆ ಮಾತನಾಡುತ್ತಾ, "ಬಿಜೆಪಿ ನೇತೃತ್ವದ ಈ ಸರಕಾರವು ಸಂವಿಧಾನವನ್ನು ಗೌರವಿಸುವುದಿಲ್ಲ ... ಅವರು ಸಂವಿಧಾನದ ಪ್ರಕಾರ ಆಡಳಿತ ನಡೆಸುವುದಿಲ್ಲ ಆದರೆ ಸಂವಿಧಾನ ದಿನವನ್ನು ಆಚರಿಸಲು ಬಯಸುತ್ತಾರೆ ... ಇದು ಅವರು 2019 ರಲ್ಲಿ ಪ್ರಾರಂಭಿಸಿದ ಪ್ರಚಾರ ಕಾರ್ಯಕ್ರಮವಾಗಿದೆ ಎಂದರು.

ಇಂದು ಬೆಳಿಗ್ಗೆ ನಡೆದ ಕಾರ್ಯಕ್ರಮವು 'ಸಂವಿಧಾನ ದಿವಸ್' ಅನ್ನು ಸ್ಮರಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಲೋಕಸಭೆ ಸ್ಪೀಕರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News