ಉಡುಪಿ: ಜಿಲ್ಲಾಧಿಕಾರಿಯಿಂದ ಸಂವಿಧಾನ ಪೀಠಿಕೆ ಬೋಧನೆ
ಉಡುಪಿ, ನ.26: ಸಂವಿಧಾನ ದಿನದ ಅಂಗವಾಗಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಶುಕ್ರವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ಹಾಲ್‌ನಲ್ಲಿ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಗಳಿಗೆ ಸಂವಿಧಾನ ದಿನದ ಪೀಠಿಕೆಯನ್ನು ಬೋಧಿಸಿದರು.
ಭಾರತ ದೇಶದ ನಾಗರಿಕರಾದ ನಾವು, ಭಾರತವನ್ನು ಒಂದು ಸಾರ್ವಭೌಮ, ಸಮಾಜವಾದಿ, ಸರ್ವಧರ್ಮ ಸಮಭಾವದ ಪ್ರಜಾ ಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಮತ್ತು ಸಮಸ್ತ ನಾಗರಿಕರಿಗೆ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರ್ಯ, ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು, ವ್ಯಕ್ತಿ ಗೌರವವನ್ನು ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುನಿಶ್ಚಿತಗೊಳಿಸಿ, ಎಲ್ಲರಲ್ಲಿ ಭ್ರಾತೃತ್ವ ಭಾವನೆಯನ್ನು ವೃದ್ಧಿಗೊಳಿಸಲು ಶ್ರದ್ಧಾಪೂರ್ವಕ ಸಂಕಲ್ಪ ಮಾಡಿ, ನಮ್ಮ ಸಂವಿಧಾನವನ್ನು ಅಂಗೀಕರಿಸಿದ್ದೇವೆ. ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ. ಅದರಂತೆ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಸಂವಿಧಾನದ ಆಶಯಗಳಿಗೆ ಬದ್ಧರಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದರು.
ಭಾರತದ 75ನೇ ಸ್ವಾತಂತ್ರ್ಯೋತ್ಸವ ಆಜಾದಿ ಕಾ ಅಮೃತ ಮಹೋತ್ಸವದ ಈ ಅವಧಿಯಲ್ಲಿ, ದೇಶದ ಪ್ರತಿಯೊಬ್ಬ ನಾಗರಿಕರೂ ನಮ್ಮ ಸಂವಿಧಾನದಲ್ಲಿರುವ ಸಾಂವಿಧಾನಿಕ ವೌಲ್ಯಗಳನ್ನು ಅರಿಯಬೇಕು ಮತ್ತು ಅದಕ್ಕೆ ಬದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಜಿಲ್ಲಾಧಿಕಾರಿ ಕಚೇರಿ ಯ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.