×
Ad

ಕಡತಗಳ್ನು ಶೀಘ್ರ ವಿಲೇವಾರಿ ಮಾಡಿ: ಉಡುಪಿ ಜಿಲ್ಲಾಧಿಕಾರಿ

Update: 2021-11-26 19:57 IST

ಉಡುಪಿ, ನ.26: ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಜಿಲ್ಲೆಯ ಎಲ್ಲಾ ಕಚೇರಿ ಗಳ ಕಡತಗಳನ್ನು ಕಾಲಮಿತಿಯಲ್ಲಿ ಶೀಘ್ರದಲ್ಲಿ ವಿಲೇವಾರಿ ಮಾಡುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸ್ಪಷ್ಟವಾದ ಸೂಚನೆಗಳನ್ನು ನೀಡಿದ್ದಾರೆ.

ಶುಕ್ರವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಕೋರ್ಟ್‌ಹಾಲ್ ನಲ್ಲಿ, ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ಸಂವಿಧಾನ ದಿನದ ಅಂಗವಾಗಿ ಸಂವಿಧಾನ ಪೀಠಿಕೆ ಬೋಧಿಸಿದ ನಂತರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಧಿಕಾರಿ ಕಚೇರಿ, ಎಲ್ಲಾ ತಾಲೂಕು ಕಚೇರಿಗಳು ಹಾಗೂ ಕುಂದಾಪುರ ಉಪವಿಭಾಗಾಧಿಕಾರಿ ಕಚೇರಿಗೆ ಸಂಬಂಧಿಸಿದ ಕಡತಗಳನ್ನು ಇ-ಕಚೇರಿ ಮೂಲಕವೇ ತ್ವರಿತವಾಗಿ ವಿಲೇವಾರಿ ಮಾಡುವಂತೆ ಹಾಗೂ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು 2 ತಿಂಗಳ ಒಳಗೆ ಸಂಪೂರ್ಣ ಇ-ಕಚೇರಿ ಮೂಲಕ ಕಡತಗಳನ್ನು ನಿರ್ವಹಣೆ ಮಾಡಬೇಕು. ಈ ಕುರಿತಂತೆ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ಮತ್ತಿತರ ಮೂಲ ಸೌಕರ್ಯಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಸೂಚನೆ ನೀಡಿದರು.

ಜಿಲ್ಲೆಯ ಆಡಳಿತ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು. ಈ ನಿಟ್ಟಿನಲ್ಲಿ ಎಲ್ಲಾ ಕಡತಗಳನ್ನು ಸೂಕ್ತ ರೀತಿಯಲ್ಲಿ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ಪೌರಾಯುಕ್ತ ಉದಯ ಶೆಟ್ಟಿ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News