ಬಾಕಿ ಇರುವ ಕಡತಗಳ ಶೀಘ್ರ ವಿಲೇವಾರಿಗೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Update: 2021-11-27 14:55 GMT
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ನ. 27: `ಸರಕಾರದಲ್ಲಿ 2 ವರ್ಷದಿಂದ ಕಡತಗಳು ವಿಲೇವಾರಿಯಾಗದೇ ಬಾಕಿ ಇದ್ದು, ಕೆಲವು ಇಲಾಖೆಗಳಲ್ಲಿ ತಾಂತ್ರಿಕ ಮತ್ತು ಕಾನೂನಾತ್ಮಕ ಕಾರಣಗಳಿಂದ ಕಡತಗಳು ನಿರ್ಣಯವಾಗದೇ ಉಳಿದಿದೆ. ಇದಕ್ಕಿರುವ ಕಾನೂನು ಹಾಗೂ ತಾಂತ್ರಿಕ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಕಾನೂನು ಸಚಿವರ ಅಭಿಪ್ರಾಯವನ್ನೂ ಪಡೆದು ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಕಡತ ವಿಲೇವಾರಿಗೆ ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಣೆ ನೀಡಿದರು.

ಚರ್ಚೆ: ಕೋವಿಡ್‍ನ ಹೊಸ ತಳಿ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಆರೋಗ್ಯ ಇಲಾಖೆ, ವಿಕೋಪ ನಿರ್ವಹಣೆ, ತಜ್ಞರ ಸಮಿತಿಯವರೊಂದಿಗೆ ಸಭೆ ನಡೆಸಲಾಗುವುದು. ಧಾರವಾಡ, ಬೆಂಗಳೂರು, ಬೆಂಗಳೂರು ಗ್ರಾಮಾಂತರದ ಶಾಲೆಗಳು ಮತ್ತು ಹಾಸ್ಟೆಲ್‍ಗಳಲ್ಲಿ ಕೋವಿಡ್ ಉಲ್ಬಣವಾಗುತ್ತಿದೆ ಹಾಗೂ ಕೇರಳ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದನ್ನು ಗಮನಿಸಲಾಗಿದೆ.

ರಾಜ್ಯದಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಹೊಸ ತಳಿಯ ಬಗ್ಗೆ ಸರಕಾರ ಹಾಗೂ ಸಾರ್ವಜನಿಕರು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ ಸಂದರ್ಭದಲ್ಲಿ ವಿವರಣೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News