ಕೋವಿಡ್ ನಿಯಮ ಪಾಲನೆಗೆ ಸಿಎಂ ತಾಕೀತು: ಉಡುಪಿ ಡಿಸಿ ಕೂರ್ಮಾರಾವ್

Update: 2021-11-27 16:05 GMT
ಕೂರ್ಮಾರಾವ್

ಉಡುಪಿ, ನ.27: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಂಜೆ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಏಳು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ವೀಡಿಯೋ ಸಂವಾದ ನಡೆಸಿದ್ದು, ಕೋವಿಡ್-19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೆಲವು ನಿರ್ದೇಶನಗಳನ್ನು ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಬೊಸ್ವಾನಾ, ದಕ್ಷಿಣ ಆಫ್ರಿಕಾ, ಹಾಂಗ್‌ ಕಾಂಗ್ ಮುಂತಾದ ರಿಸ್ಕ್ ಇರುವ ದೇಶಗಳಿಂದ ಬರುವ ಪ್ರಯಾಣಿಕರ ಕುರಿತು ಹೆಚ್ಚಿನ ನಿಗಾ ಇರಿಸುವಂತೆ, ಎಲ್ಲರನ್ನೂ ಆರ್‌ಟಿಪಿಸಿಆರ್ ಪರೀಕ್ಷೆಗೊಳಪಡಿಸುವಂತೆ ಮುಖ್ಯಮಂತ್ರಿ ತಿಳಿಸಿದ್ದಾರೆ ಎಂದು ಕೂರ್ಮಾರಾವ್ ಅವರು ನೀಡಿದ ವೀಡಿಯೋ ಸಂದೇಶದಲ್ಲಿ ತಿಳಿಸಿದರು.

ಜಿಲ್ಲೆಯ ಎಲ್ಲರಿಗೂ ಎರಡು ಡೋಸ್ ಲಸಿಕೆಯನ್ನು ನೀಡುವಂತೆ ಹಾಗೂ ಲಸಿಕಾಕರಣದಲ್ಲಿ ಶೇ.100ರಷ್ಟು ಸಾಧನೆ ಮಾಡುವು ದಕ್ಕೆ ಆದ್ಯತೆ ನೀಡುವಂತೆ ತಿಳಿಸಿದ ಮುಖ್ಯಮಂತ್ರಿಗಳು ಎಲ್ಲರೂ ಮಾಸ್ಕ್ ಧಾರಣೆ, ಸುರಕ್ಷತಾ ಅಂತರ ಹಾಗೂ ಸ್ಯಾನಟೈಸರ್‌ನಿಂದ ಕೈತೊಳೆಯುವುದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ ಎಂದರು.

ಹೀಗಾಗಿ ಜಿಲ್ಲೆಯ ಎಲ್ಲರೂ ಎರಡು ಲಸಿಕೆಗಳನ್ನು ತೆಗೆದುಕೊಳ್ಳುವಂತೆ ಹಾಗೂ ತಪ್ಪದೇ ಕೋವಿಡ್ ನಿಯಮಾವಳಿಗಳನ್ನು ಪಾಲಿಸುವಂತೆ ತಾನು ಎಲ್ಲರಲ್ಲೂ ಮನವಿ ಮಾಡುವುದಾಗಿ ಹೇಳಿದ ಕೂರ್ಮಾರಾವ್, ಉಡುಪಿ ಜಿಲ್ಲೆಯನ್ನು ಕೋವಿಡ್ ಮುಕ್ತ ಜಿಲ್ಲೆಯಾಗಿ ಮಾಡುವಲ್ಲಿ ಎಲ್ಲರೂ ಸಹಕರಿಸುವಂತೆ ಜನರಲ್ಲಿ ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News