ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಇಬ್ಬರು ಡ್ರಗ್ ಪೆಡ್ಲರ್‌ಗಳ ಸೆರೆ, 30 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ

Update: 2021-11-29 05:04 GMT

ಬೆಂಗಳೂರು, ನ.29: ಇಬ್ಬರು ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಿರುವ ಬೆಂಗಳೂರು ನಗರ ಸಿಸಿಬಿ ಮಾದಕದ ದ್ರವ್ಯ ನಿಗ್ರಹ ದಳದ ಪೊಲೀಸರು, ಬಂಧಿತರಿಂದ 30 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಮಾದಕ ವಸ್ತುಗಳಾದ ಎಂ.ಡಿ.ಎಂ.ಎ ಕ್ರಿಸ್ಟೆಲ್, ಚರಸ್ ಮತ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ ರವಿವಾರ ಈ ಕಾರ್ಯಾಚರಣೆ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ ಸುಮಾರು 30 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳಾದ ಎಂ.ಡಿ.ಎಂ.ಎ ಕ್ರಿಸ್ಟೆಲ್, ಚರಸ್ ಮತ್ತು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಈ ಆರೋಪಿಗಳು ನೈಜೀರಿಯಾ ದೇಶದ ವ್ಯಕ್ತಿಯೊಬ್ಬನಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ಖರೀದಿಸಿ ಅವುಗಳನ್ನು ಹೆಚ್ಚಿನ ಬೆಲೆಗೆ ಐಟಿ/ಬಿಟಿ ಕಂಪನಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸ್ಥಳೀಯರಿಗೆ ಮಾರಾಟ ಮಾಡುವ ಕೃತ್ಯದಲ್ಲಿ ತೊಡಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಎಲೆಕ್ಟ್ರಾನಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಬೆಂಗಳೂರು ನಗರ, ಉಪ ಪೊಲೀಸ್ ಆಯುಕ್ತ ಅಪರಾಧ-2 ಬೆಂಗಳೂರು ಇವರ ಮಾರ್ಗದರ್ಶನದಲ್ಲಿ, ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಸಹಾಯಕ ಪೊಲೀಸ್ ಆಯುಕ್ತ ಕೆ.ಸಿ.ಗೌತಮ್ ಮುಂದಾಳತ್ವದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್‌ ಬಿ.ಎಸ್.ಅಶೋಕ್, ಪಿಎಸ್ಸೈ ಪ್ರೇಮ್‌ಕುಮಾರ್, ಸಿಬ್ಬಂದಿ ವಿನಯ್, ಶಹನೂರ್, ಶಿವಪ್ಪ, ದ್ಯಾವರಸಯ್ಯ, ಮಂಜುನಾಥ ಮತ್ತು ಮಲ್ಲಿಕಾರ್ಜುನ್ ರನ್ನು ಒಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News