ಸಾರ್ವಜನಿಕ ಸ್ಥಳಗಳಿಗೆ ಸಂಚರಿಸುವವರಿಗೆ ಎರಡು ಡೋಸ್ ಲಸಿಕೆ ಕಡ್ಡಾಯ: ಬಿಬಿಎಂಪಿ ಚಿಂತನೆ

Update: 2021-12-02 14:58 GMT

ಬೆಂಗಳೂರು, ಡಿ.2: ಬಿಬಿಎಂಪಿ ವ್ಯಾಪ್ತಿಯಲ್ಲಿ ಎರಡನೆ ಲಸಿಕೆಯನ್ನು ಪಡೆಯಲು ಸಾರ್ವಜನಿಕರು ಮುಂದೆ ಬರುತ್ತಿಲ್ಲ. ಆದುದರಿಂದ ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸುವವರಿಗೆ ಎರಡೂ ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಪ್ರವೇಶ ನೀಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಆರೋಗ್ಯಾಧಿಕಾರಿಗಳ ಸಭೆಯಲ್ಲಿ ನಿರ್ಧರಿಸಿದ್ದಾರೆ.

ಗುರುವಾರ ಪಾಲಿಕೆ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜನರು ಎರಡನೆಯ ಡೋಸ್ ಲಸಿಕೆಯನ್ನು ಪಡೆಯುಲು ಮುಂದೆ ಬರುತ್ತಿಲ್ಲ. ಹಾಗಾಗಿ ಉದ್ಯಾನ, ಚಿತ್ರಮಂದಿರ, ಮಾಲ್ ಹಾಗೂ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವವರು ಎರಡು ಡೋಸ್ ಲಸಿಕೆ ಪಡೆದಿರಬೇಕು ಎಂದು ತಿಳಿಸಿದರು.

ನಗರದಲ್ಲಿ ಕೊರೋನ ರೂಪಾಂತರಿ ವೈರಾಣು ನಿಯಂತ್ರಣಕ್ಕೆ ತಜ್ಞರ ಸಮಿತಿಯು ನೀಡಿರುವ ಸಲಹೆ ಸೂಚನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಪಾಲಿಕೆ ವ್ಯಾಪ್ತಿಯ ಕೊರೋನ ಕ್ಲಸ್ಟರ್‍ಗಳ ಮೇಲೆ ಗಮನಹರಿಸಬೇಕು. ಸಭೆ, ಸಮಾರಂಭಗಳು, ಕಾರ್ಯಕ್ರಮಗಳಲ್ಲಿ ಕೋವಿಡ್ ನಿಯಮಗಳ ಪಾಲನೆಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು. ಇಂಥ ಕಾರ್ಯಕ್ರಮಗಳಲ್ಲಿ ಕಡಿಮೆ ಸಂಖ್ಯೆಯ ಜನರು ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಕೋವಿಡ್ ರೂಪಾಂತರಿ ವೈರಸ್‍ನಿಂದ ವಿಶ್ವದಾದ್ಯಂತ ಸಾಕಷ್ಟು ಬದಲಾವಣೆಗಳು ಆಗುತ್ತಿವೆ. ಆದಕಾರಣ, ತಜ್ಞರ ಸಮಿತಿಯು ನೀಡಿದ ಸೂಚನೆಯಂತೆ ವಿದೇಶಗಳಿಂದ ಬರುವ ಪ್ರಯಾಣಿಕರಿಗೆ ಪರೀಕ್ಷೆ ಮಾಡಿ, ಕ್ವಾರಂಟೈನ್‍ಗೆ ಒಳಪಡಿಸಬೇಕು. ಟೆಸ್ಟ್‍ನಲ್ಲಿ ಸಂಗ್ರಹಿಸಿದ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‍ಗೆ ಕಳುಹಿಸಬೇಕು. ನಗರದಲ್ಲಿನ ಕಂಟೈನ್ಮೆಂಟ್ ವಲಯಗಳ ಮೇಲೆ ಹೆಚ್ಚಿನ ನಿಗಾ ಇಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪಾಲಿಕೆಯ ವ್ಯಾಪ್ತಿಯಲ್ಲಿ ಕೋವಿಡ್ ಪರೀಕ್ಷಾ ಪ್ರಮಾಣವನ್ನು ಜಾಸ್ತಿ ಮಾಡಬೇಕು. ಒಮೈಕ್ರಾನ್ ಹಾಗೂ ಇನ್ನಿತರೆ ವೈರಾಣು ಸೋಂಕು ಹರಡದಂತೆ ತಡೆಯಲು ಅಗತ್ಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಹಾಗೆಯೇ, ಶಾಲೆಗಳಲ್ಲಿ ಕನಿಷ್ಠ ತಿಂಗಳಿಗೊಮ್ಮೆ ಶೇ.10ರಷ್ಟು ಮಕ್ಕಳಿಗೆ ಕೋವಿಡ್ ಪರೀಕ್ಷೆ ಮಾಡಬೇಕು ಎಂದು ಅವರು ಹೇಳಿದರು.

ಸಭೆಯಲ್ಲಿ ಪಾಲಿಕೆಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಾ. ತ್ರಿಲೋಕ್‍ಚಂದ್ರ, ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್, ನಿರ್ಮಲಾ ಬುಗ್ಗಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News