×
Ad

ಕೋವಿಡ್ ರೂಪಾಂತರಿ ಸೋಂಕು: ಅಧಿಕಾರಿ ಮತ್ತು ಸಿಬ್ಬಂದಿಗೆ ಎರಡು ಡೋಸ್ ಲಸಿಕೆ ಕಡ್ಡಾಯ?

Update: 2021-12-05 00:05 IST

ಬೆಂಗಳೂರು, ಡಿ. 4: ‘ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇದೇ ತಿಂಗಳ 13ರಿಂದ ನಡೆಯಲಿರುವ ವಿಧಾನಮಂಡಲ ಅಧಿವೇಶನದ ಕರ್ತವ್ಯಕ್ಕೆ ತೆರಳುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕೋವಿಡ್ ಎರಡು ಡೋಸ್ ಲಸಿಕೆ ಕಡ್ಡಾಯ, 50 ವರ್ಷ ಮೇಲ್ಪಟ್ಟ ಸಿಬ್ಬಂದಿ ಹಾಗೂ ವಿಕಲಚೇತನರು, ಅಸ್ತಮಾ ಸಹಿತ ಇತರೆ ಕಾಯಿಲೆ ಇರುವವರಿಗೆ ವಿನಾಯಿತಿ ನೀಡುವ ಸಾಧ್ಯತೆಗಳಿವೆ.

ಕೋವಿಡ್ ರೂಪಾಂತರಿ ಒಮೈಕ್ರಾನ್ ಸೋಂಕು ದೇಶದಲ್ಲೇ ಮೊದಲ ಪ್ರಕರಣ ಕರ್ನಾಟಕದಲ್ಲಿ ಪತ್ತೆಯಾಗಿದ್ದು, ಅಧಿವೇಶನದಲ್ಲಿ ಭಾಗವಹಿಸಲು ಸಚಿವರು, ಶಾಸಕರು ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ಆತಂಕ ಮನೆ ಮಾಡಿದೆ. ಈ ನಡುವೆ 2 ವರ್ಷಗಳಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸಿಲ್ಲ. ಹೀಗಾಗಿ ಈ ಬಾರಿಯೂ ಸುವರ್ಣ ವಿಧಾನಸೌಧದಲ್ಲಿ ಕಲಾಪ ನಡೆಸದಿದ್ದರೆ ತಪ್ಪು ಸಂದೇಶ ರವಾನೆಯಾಗಲಿದೆ ಎಂಬ ಅನಿವಾರ್ಯತೆ ಹಿನ್ನೆಲೆಯಲ್ಲಿ ಸರಕಾರ ವಲ್ಲದ ಮನಸ್ಸಿನಿಂದಲ್ಲೇ ಅಧಿವೇಶನ ನಡೆಸಲು ಮುಂದಾಗಿದೆ.

ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಅಧಿವೇಶನ ನಡೆಸಲು ಈಗಾಗಲೇ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿರುವ ರಾಜ್ಯ ಸರಕಾರ, ಕೋವಿಡ್ ಎರಡು ಡೋಸ್ ಲಸಿಕೆ ಪಡೆದ ಸಿಬ್ಬಂದಿಯನ್ನು ಮಾತ್ರ ಕರೆದೊಯ್ಯಲು ಚಿಂತಿಸಲಾಗಿದೆ. ಕಡಿಮೆ ಸಿಬ್ಬಂದಿಯೊಂದಿಗೆ ಅಧಿವೇಶನ ನಡೆಸುವ ಚಿಂತನೆ ಇದೆ. ಕಲಾಪ ವೀಕ್ಷಣೆಗೆ ಬರುವ ಸಾರ್ವಜನಿಕರಿಗೂ ಅವಕಾಶ ನೀಡದಿರಲು ತೀರ್ಮಾನ ಮಾಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ಈ ನಡುವೆಯೇ ರಾಜ್ಯದಲ್ಲಿ ರೂಪಾಂತರಿ ಕೋವಿಡ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಹಿರಿಯ ಸಚಿವರೂ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಮೈಕ್ರಾನ್ ಸೋಂಕಿನ ವೇಳೆ ಅಧಿವೇಶನ ನಡೆಸುವುದು ಅಸಮಂಜಸ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಚಳಿಗಾಲದ ಅಧಿವೇಶನವನ್ನು ಬೆಂಗಳೂರಿನಲ್ಲೇ ನಡೆಸುವ ಅಭಿಪ್ರಾಯ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೂ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಮನಸ್ಸಿಲ್ಲದಿದ್ದರೂ ಉತ್ತರ ಕರ್ನಾಟಕದ ಜನತೆ ಭಾವನೆಗೆ ಕಟ್ಟುಬಿದ್ದು, ಗಡಿ ಜಿಲ್ಲೆಯಲ್ಲೇ ಕಲಾಪ ನಡೆಸಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಧಿವೇಶನದ ವೇಳೆ ಸೋಂಕು ಪತ್ತೆಯಾದರೆ, ನಿಯಂತ್ರಣ ಕಷ್ಟಸಾಧ್ಯವಾಗಲಿದೆ. ಹೀಗಾಗಿ ಈ ಬಾರಿ ಅಧಿವೇಶನವನ್ನು ಬೆಂಗಳೂರಲ್ಲೇ ನಡೆಸಬೇಕೆಂದು ಆಗ್ರಹ ಕೇಳಿಬಂದಿದೆ.

ಒಮೈಕ್ರಾನ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ವಿಧಾನ ಮಂಡಲ ಅಧಿವೇಶನವನ್ನು ಮುಂದೂಡಿಕೆ ಮಾಡುವ ಸಾಧ್ಯತೆಗಳಿವೆ ಎಂಬ ನಿರೀಕ್ಷೆಯಲ್ಲಿದ್ದವರಿಗೆ ನಿನ್ನೆಯಷ್ಟೇ ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟಣೆ ನೀಡಿದ್ದು, ಈ ಬಾರಿಯ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲೇ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಮತ್ತೊಂದು ಮೂಲದ ಪ್ರಕಾರ ರಾಜ್ಯದಲ್ಲಿ ರೂಪಾಂತರಿ ಒಮೈಕ್ರಾನ್ ಭೀತಿ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಸಂಬಂಧ ಮರುಪರಿಶೀಲನೆ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News