ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧಿಸುವುದಿಲ್ಲ: ಸಚಿವ ಈಶ್ವರಪ್ಪ

Update: 2021-12-05 07:14 GMT

ಶಿವಮೊಗ್ಗ, ಡಿ.5: ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದಿಂದ ಚುನಾವಣೆಗೆ ನಿಲ್ಲುವುದಿಲ್ಲ. ಬದಲಿಗೆ ಝಮೀರ್ ಅಹ್ಮದ್ ಖಾನ್ ಕಾಲು ಹಿಡಿದು ಚಾಮರಾಜಪೇಟೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಗೆಲ್ಲಲ್ಲು ಸಿದ್ದರಾಮಯ್ಯರಿಗೆ ಮುಸ್ಲಿಮರೇ ಗತಿ ಎಂದು ವ್ಯಂಗ್ಯವಾಡಿದರು.

ನಮ್ಮ ಪಕ್ಷಕ್ಕೆ ಸಂಬಂಧಿಸಿದ ವಿಚಾರವನ್ನು ನಾನು ಯಾವಾಗಲಾದರೂ ಮಾತನಾಡುತ್ತೇನೆ. ಅದನ್ನು ಕೇಳಲು ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಯಾರು ಎಂದು ಪ್ರಶ್ನಿಸಿದ ಈಶ್ವರಪ್ಪ, ನಮ್ಮಲ್ಲಿ ಯಾವ ಗೊಂದಲವೂ ಇಲ್ಲ.ಕಾಂಗ್ರೆಸ್ಸಿಗರು ಅವರ ಪಕ್ಷದಲ್ಲಿರುವ ಗುಂಪುಗಾರಿಕೆ ಮುಚ್ಚಿಹಾಕಲು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ಸಿಗರಿಗೆ ಅವರ ಪಕ್ಷವನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಶಕ್ತಿಯಿಲ್ಲ‌. ಹೀಗಾಗಿ ಬಿಜೆಪಿ ವಿರುದ್ಧ ಮಾತನಾಡಿ ಪ್ರಚಾರ ಪಡೆಯುತ್ತಿದ್ದಾರೆ ಎಂದರು.

ಮುರುಗೇಶ್ ನಿರಾಣಿ ಮುಖ್ಯಮಂತ್ರಿಯಾಗುತ್ತಾರೆ ಎಂಬ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ,

ಸಣ್ಣ ಕೈಗಾರಿಕೋದ್ಯಮಿಯಾಗಿರುವ ಮುರುಗೇಶ್ ನಿರಾಣಿ ಇಂದು ದೊಡ್ಡ ಕೈಗಾರಿಕೋದ್ಯಮಿಯಾಗಿದ್ದಾರೆ. ನಿರಾಣಿ ಪ್ರತಿಭಾವಂತ ಮುಂದೊಂದು ದಿನ ಮುಖ್ಯಮಂತ್ರಿಯಾಗುವ ಅವಕಾಶವಿದೆ ಎಂದು ಹೇಳುವ ಮೂಲಕ ಅವರ ಪ್ರತಿಭೆ ಪ್ರೋತ್ಸಾಹಿಸಿದ್ದೇನೆ. ಆದರೆ ಮುಂದಿನ ಚುನಾವಣೆವರೆಗೂ ಬಸವರಾಜ ಬೊಮ್ಮಾಯಿ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News