ಅಪಘಾತ: ಆರೋಪಿಗೆ ಶಿಕ್ಷೆ

Update: 2021-12-06 17:02 GMT

ಉಡುಪಿ, ಡಿ.6: ಅತಿ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಇಬ್ಬರ ಸಾವಿಗೆ ಕಾರಣವಾದ ಆರೋಪಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯವು ಜೈಲುಶಿಕ್ಷೆ ವಿಧಿಸಿದೆ.

2015ರ ಜುಲೈ 19ರಂದು ಬೆಳಗ್ಗೆ 10 ಗಂಟೆಗೆ ಹಿರಿಯಡ್ಕ ಪ್ರಥಮ ದರ್ಜೆ ಕಾಲೇಜ್ ಗೇಟ್ ಬಳಿ ಯೋಹಾನ್ ಎಂಬಾತನು ತನ್ನ ಕಾರನ್ನು ಪೆರ್ಡೂರು ಕಡೆಯಿಂದ ಹಿರಿಯಡ್ಕ ಕಡೆಗೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ, ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸರಸ್ವತಿ ಎಂಬ ಮಹಿಳೆ ಹಾಗೂ ದಿತಿ ಮತ್ತು ತೇಜಸ್ವಿ ಎಂಬ ಬಾಲಕಿಯರಿಗೆ ಹಿಂದಿನಿಂದ ಢಿಕ್ಕಿ ಹೊಡೆದು ಅಪಘಾತ ನಡೆಸಿದ್ದು, ಅಪಘಾತದಲ್ಲಿ ಸರಸ್ವತಿ ಮತ್ತು ಬಾಲಕಿ ದಿತಿ ಮೃತಪಟ್ಟಿದ್ದು, ಇನ್ನೊರ್ವ ಬಾಲಕಿ ತೇಜಸ್ವಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದವು. ಹಿರಿಯಡ್ಕ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶೆ ದೀಪಾ ಅವರು ಆರೋಪಿ ಯೋಹಾನ್‌ಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಬದರೀನಾಥ್ ನಾಯರಿ ವಾದಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News