ಉಡುಪಿ: ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ ಆರೋಪಿಗಳಿಗೆ ಜೈಲು ಶಿಕ್ಷೆ, ದಂಡ

Update: 2021-12-07 16:31 GMT

ಉಡುಪಿ, ಡಿ.7: ತೀವ್ರವಾಗಿ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ ಆರೋಪಿಗಳಿಗೆ ನಗರದ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

2011ರ ಫೆಬ್ರವರಿ 8ರಂದು ರಾತ್ರಿ 11 ಗಂಟೆ ಸುಮಾರಿಗೆ ಉಡುಪಿ ತಾಲೂಕು ಚಾಂತಾರು ಗ್ರಾಮದ ಗೋಳಿಕಟ್ಟೆ ನಿವಾಸಿಗಳಾದ ಸೋಮನಾಥ ನಾರಿ ಹಾಗೂ ಶ್ರೀನಿವಾಸ ನಾರಿ ಎಂಬವರು, ವಾರಂಬಳ್ಳಿ ಗ್ರಾಮದ ಮೂಡುಬಿರ್ತಿಯ ನಿವಾಸಿ ಹೇಮಾ ನಾರಿಯವರಿಗೆ ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಹಾರೆ ಹಾಗೂ ಸುತ್ತಿಗೆಯಿಂದ ತೀವ್ರ ತರಹದ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿರುವ ಹಿನ್ನೆಲೆಯಲ್ಲಿ ಬ್ರಹ್ಮಾವರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್‌ಪ್ರಕಾಶ್ ಅವರು ಆರೋಪಿಗಳಾದ ಸೋಮನಾಥ ನಾರಿ ಹಾಗೂ ಶ್ರೀನಿವಾಸ ನಾರಿಗೆ 5 ವರ್ಷ ಕಾರಾಗೃಹ ಶಿಕ್ಷೆ ಹಾಗೂ 11,000 ರೂ. ದಂಡ ವಿಧಿಸಿ, ತೀರ್ಪು ನೀಡಿದ್ದಾರೆ.

ಸರಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಮೋನಿ ಕೆ. ವಾದ ಮಂಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News