ವಿಧಾನ ಪರಿಷತ್ ಚುನಾವಣೆ: 25 ಸ್ಥಾನಗಳಿಗೆ ನಾಳೆ ಮತದಾನ

Update: 2021-12-09 05:42 GMT
ಮತ ಪೆಟ್ಟಿಗೆಯನ್ನು ಪರಿಶೀಲಿಸುತ್ತಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ 
ಜೆ.ಮಂಜುನಾಥ್

ಬೆಂಗಳೂರು, ಡಿ. 9: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ನಾಳೆ(ಡಿ.10) ಮತದಾನ ನಡೆಯಲಿದ್ದು, ಘಟಾನುಘಟಿ ಅಭ್ಯರ್ಥಿಗಳು ಕೊನೆಯ ಕ್ಷಣದಲ್ಲಿ ಮತದಾರರ ಮನ ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸಿದರು. ಈ ಮಧ್ಯೆ ಸ್ಥಳೀಯ ಸಂಸ್ಥೆಗಳ ಮತದಾರರಿಗೆ (ಪ್ರತಿನಿಧಿಗಳಿಗೆ) ಹಣ, ಒಡವೆ ಸಹಿತ ಇನ್ನಿತರ ಆಮಿಷವೊಡ್ಡಲಾಗುತ್ತಿದೆ ಎಂಬ ಸುದ್ದಿಗಳ ಹರಿದಾಡುತ್ತಿವೆ.

ಬಹಿರಂಗ ಪ್ರಚಾರಕ್ಕೆ ನಿನ್ನೆಯೆ ತೆರೆ ಬಿದ್ದಿದ್ದು, ಅಭ್ಯರ್ಥಿಗಳು ಯಾವುದೇ ಸದ್ದು-ಗದ್ದಲವಿಲ್ಲದೆ ಕೊನೆಯ ಕ್ಷಣದಲ್ಲಿ ಮತದಾರರನ್ನು ಓಲೈಸುವ ಕೆಲಸವನ್ನಿಂದು ನಡೆಸಿದರು. ಅಭ್ಯರ್ಥಿಗಳು ಮತದಾರರ ಮನೆಗೆ ತೆರಳಿ ಮತ ಯಾಚಿಸಿದ್ದಾರೆ. ಪರಿಷತ್‍ನ 20 ಕ್ಷೇತ್ರಗಳ 25 ಸ್ಥಾನಗಳಿಗೆ ಸ್ಥಳೀಯ ಸಂಸ್ಥೆಗಳಿಂದ ಚುನಾವಣೆ ನಡೆಯುತ್ತಿದೆ.

2023ರ ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ ನಡೆಯುತ್ತಿರುವ ಈ ಚುನಾವಣೆ ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ತೀವ್ರ ಪೈಪೋಟಿ ಸೃಷ್ಟಿಸಿದ್ದು, ಮೂರು ರಾಜಕೀಯ ಪಕ್ಷಗಳ ಮೇಲ್ಮನೆ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದು, ತಮ್ಮ ಅಭ್ಯರ್ಥಿಗಳ ಗೆಲುವಿಗೆ ಅಬ್ಬರದ ಪ್ರಚಾರ ನಡೆಸಿದ್ದಾರೆ.

ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ 20 ಕ್ಷೇತ್ರಗಳಲ್ಲಿಯೂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಜೆಡಿಎಸ್ ಆರು ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ 90 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಪೈಪೋಟಿ ಏರ್ಪಟ್ಟಿದ್ದರೆ, ಜೆಡಿಎಸ್ ಸ್ಪರ್ಧಿಸಿರುವ 6 ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ ಇದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಹೋದರ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್‍ಗೆ ತೀವ್ರ ಪೈಪೆÇೀಟಿ ನೀಡಿದ್ದು, ಈ ಕ್ಷೇತ್ರದ ಚುನಾವಣೆ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಜಾರಕಿಹೊಳಿ ಸಹೋದರರ ನಡುವೆ ಸ್ಪರ್ಧೆ ಇದ್ದು ಯಾರು ಗೆಲುವು ಸಾಧಿಸಲಿದ್ದಾರೆಂಬ ನಿರೀಕ್ಷೆ ಹೆಚ್ಚಿಸಿದೆ.

ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಮತದಾನಕ್ಕೆ ಒಟ್ಟು 6,072 ಮತಗಟ್ಟೆಗಳನ್ನು ಸ್ಥಾಪಿಸಿದೆ. ಡಿ.10ರ ಬೆಳಗ್ಗೆ 8ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದ್ದು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಿದ್ದು, ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಡಿ.14ರಂದು ಆಯಾ ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಅಂದು ಮಧ್ಯಾಹ್ನದ ವೇಳೆ ಫಲಿತಾಂಶ ಬಹಿರಂಗಗೊಳ್ಳುವ ಸಾಧ್ಯತೆಗಳಿವೆ.

ಕಾಂಗ್ರೆಸ್‍ಗೆ ಬೆಂಬಲ

‘ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಗದಗ, ಹಾವೇರಿ ಹಾಗೂ ಧಾರವಾಡ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗೆ ಜೆಡಿಎಸ್ ಸಂಪೂರ್ಣ ಬೆಂಬಲವನ್ನು ಸೂಚಿಸಿದ್ದೇವೆ. ಪಕ್ಷದ ವರಿಷ್ಠರ ಸೂಚನೆಯಂತೆ ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಿ ಸಲೀಂ ಅಹ್ಮದ್‍ರಿಗೆ ಬೆಂಬಲ ಸೂಚಿಸಲು ತೀರ್ಮಾನಿಸಿದ್ದು, ಪಕ್ಷದ ಸಾವಿರಕ್ಕೂ ಅಧಿಕ ಕಾರ್ಯಕರ್ತರು ಹಾಗೂ ಅವರ ಬೆಂಬಲಿಗರು ಕಾಂಗ್ರೆಸ್ ಪರವಾಗಿ ಕೆಲಸ ಮಾಡಬೇಕು ಎಂದು ತಿಳಿಸಲಾಗಿದೆ'

-ಎನ್.ಎಚ್.ಕೋನರೆಡ್ಡಿ ಮಾಜಿ ಶಾಸಕ, ಜೆಡಿಎಸ್ ಮುಖಂಡ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News