ಮಂಗಳೂರು: ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್‌ಗಿರಿ
ಮಂಗಳೂರು, ಡಿ.10: ನಗರದಲ್ಲಿ ಇಬ್ಬರು ವಿದ್ಯಾರ್ಥಿಗಳ ಮೇಲೆ ಸಂಘ ಪರಿವಾರದ ಕಾರ್ಯಕರ್ತರು ಅನೈತಿಕ ಪೊಲೀಸ್‌ಗಿರಿ ನಡೆಸಿದ ಘಟನೆ ಶುಕ್ರವಾರ ನಡೆದಿದೆ.
ಶುಕ್ರವಾರ ಬೆಳಗ್ಗೆ ನಗರ ಸರ್ವಿಸ್ ಬಸ್ ನಿಲ್ದಾಣದಲ್ಲಿದ್ದ ಬಸ್ಸಿನಿಂದ ಇಬ್ಬರು ವಿದ್ಯಾರ್ಥಿಗಳನ್ನು ಕೆಳಗಿಳಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ನಗರದ ಸ್ಟೇಟ್‌ಬ್ಯಾಂಕ್ ಸಮೀಪದ ಖಾಸಗಿ ಬಸ್ ನಿಲ್ದಾಣದಲ್ಲಿ ಮಂಗಳೂರಿನಿಂದ ಉಡುಪಿಗೆ ತೆರಳಲು ಇಬ್ಬರು ಬಸ್ಸಿನಲ್ಲಿ ಕುಳಿತಿದ್ದರು.
ಶಿವಮೊಗ್ಗ ಮೂಲದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಉಡುಪಿ ಮೂಲದವರು ಎನ್ನಲಾಗಿದೆ.
ನಗರ ಹೊರವಲಯದ ಮಂಗಳೂರಿನ ವಾಮಂಜೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಯಾಗಿರುವ ಇವರು ಉಡುಪಿಗೆ ತೆರಳುವ ಬಸ್ಸಿನಲ್ಲಿ ಕುಳಿತಿದ್ದುದನ್ನು ಕಂಡ ಸಂಘ ಪರಿವಾರದ ಕಾರ್ಯಕರ್ತರು ಬಸ್ಸಿನೊಳಗೆ ನುಗ್ಗಿ ವಿದ್ಯಾರ್ಥಿಗಳನ್ನು ತರಾಟೆಗೆ ತೆಗೆದು ಬಲವಂತವಾಗಿ ಕೆಳಗಿಳಿಸಿ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ವಿದ್ಯಾರ್ಥಿಯ ಗುರುತಿನ ಚೀಟಿ ಮತ್ತು ವಿಳಾಸವನ್ನು ಕೇಳಿ ಬೆದರಿಸಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಆಯುಕ್ತ ಶಶಿಕುಮಾರ್ 'ಪ್ರಕರಣದ ಬಗ್ಗೆ ಮತ್ತು ವಿದ್ಯಾರ್ಥಿಗಳು ಎಲ್ಲಿಯವರು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದಿದ್ದಾರೆ.