`ಕೃಷಿ ಕಾಯ್ದೆಗಳ ತಿದ್ದುಪಡಿ'ಗೆ ಆಗ್ರಹಿಸಿ ಡಿ.13ಕ್ಕೆ ಸುವರ್ಣಸೌಧ ಮುತ್ತಿಗೆ: ಕೋಡಿಹಳ್ಳಿ ಚಂದ್ರಶೇಖರ್

Update: 2021-12-12 12:25 GMT

ಬೆಳಗಾವಿ, ಡಿ. 12: `ಕೃಷಿ ಕಾಯ್ದೆಗಳನ್ನು ಕೇಂದ್ರ ಸರಕಾರ ವಾಪಸ್ ಪಡೆದಂತೆ ಕರ್ನಾಟಕ ಸರಕಾರವೂ ಜಾರಿಗೆ ತಂದಿರುವ ಭೂ ಸುಧಾರಣೆ, ಎಪಿಎಂಸಿ, ಜಾನುವಾರು ಸಂರಕ್ಷಣೆ ಮತ್ತು ಹತ್ಯೆ ನಿರ್ಬಂಧ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ನಾಳೆ(ಡಿ.13) ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ' ಎಂದು ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಕೇಂದ್ರ ಸರಕಾರ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿತ್ತು. ಅದರಂತೆ ಕರ್ನಾಟಕದಲ್ಲೂ ಬಿಜೆಪಿ ಸರಕಾರ ಯಥಾವತ್ತಾಗಿ ಸುಗ್ರೀವಾಜ್ಞೆ ಹೊರಡಿಸಿ ಕೃಷಿ ಮಸೂದೆಯನ್ನು ಜಾರಿಗೆ ತಂದಿತ್ತು. ಇದೀಗ ರೈತರ ಒಂದು ವರ್ಷದ ಹೋರಾಟದ ಫಲವಾಗಿ ಕೇಂದ್ರ ಸರಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದೆ. ಅದರಂತೆ ಕರ್ನಾಟಕ ಸರಕಾರವೂ ಈ ಅಧಿವೇಶನದಲ್ಲಿ ಹಿಂಪಡೆಯುವ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು.

ಆದರೆ, ಇದೀಗ ಬಿಜೆಪಿ ನಡವಳಿಕೆ ಬದಲಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಕಾನೂನು ಸಚಿವ ಮಾಧುಸ್ವಾಮಿ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ. ಈ ಮೊದಲು ಬಿಜೆಪಿ, ರೈತರ ಸರಕಾರ ಎಂದು ಕೊಳ್ಳುತ್ತಿದ್ದರು. ಇದೀಗ ರೈತರ ಹಿತಾಸಕ್ತಿಯನ್ನು ಮರೆತಿದೆ. ಒಂದು ವೇಳೆ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯದಿದ್ದರೆ ರಾಜ್ಯದಲ್ಲಿ ರೈತರ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.

ರಾಜ್ಯದಲ್ಲಿ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹಿಸಿ ದಿಲ್ಲಿ ಮಾದರಿಯಲ್ಲಿ ಕರ್ನಾಟಕ ರಾಜ್ಯದ ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ರೈತರು ಪ್ರತಿಭಟನೆ ಮಾಡಲಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಇದರ ಪರಿಣಾಮವನ್ನು ಬಿಜೆಪಿ ಸರಕಾರ ಎದುರಿಸಬೇಕಾಗುತ್ತದೆ. ಕೂಡಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಕೃಷಿ ಕಾಯ್ದೆಗಳ ತಿದ್ದುಪಡಿಯನ್ನು ವಾಪಸ್ ಪಡೆಯಬೇಕು ಎಂದು ಅವರು ಕೋರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News