ಬಿಜೆಪಿ ಅಭ್ಯರ್ಥಿ ಸೋಲಿಗೆ ಕಾರಣರಾದವರ ಬಗ್ಗೆ ತನಿಖೆ: ಬಿ.ಎಸ್.ಯಡಿಯೂರಪ್ಪ
ಬೆಳಗಾವಿ, ಡಿ.15: ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಸೋಲಿಗೆ ಕಾರಣರಾದವರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಬುಧವಾರ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಯಾರು ಸಹಕರಿಸಲಿಲ್ಲ ಎಂಬುದರ ಬಗ್ಗೆ ತನಿಖೆ ನಡೆಸಲಾಗುವುದು. ಈ ಸಂಬಂಧ ನಾನು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚೆ ಮಾಡಿದ್ದೇವೆ ಎಂದರು.
ಈ ಚುನಾವಣೆಯ ಪ್ರಭಾವವು 2023ರಲ್ಲಿ ನಡೆಯಲಿರುವ ವಿಧಾನಸಭೆಯ ಚುನಾವಣೆ ಮೇಲೂ ಬೀರಲಿದೆ. ಆದುದರಿಂದ, ನಾನು ಮುಂದಿನ ತಿಂಗಳಿನಿಂದ ಮತ್ತೆ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದೇನೆ. ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 15 ಸ್ಥಾನಗಳನ್ನು ಮೊದಲ ಪ್ರಾಶಸ್ತ್ಯದ ಮತಗಳಲ್ಲೆ ಗೆಲ್ಲಲಿದೆ ಎಂಬ ನಿರೀಕ್ಷೆ ಇತ್ತು ಎಂದು ಅವರು ಹೇಳಿದರು.
ಮಂಡ್ಯ, ಮೈಸೂರು ಸೇರಿದಂತೆ ನಿರೀಕ್ಷಿತ ಫಲಿತಾಂಶ ಸಿಗದೆ ಇರುವ ಕ್ಷೇತ್ರಗಳತ್ತ ಮುಂದಿನ ದಿನಗಳಲ್ಲಿ ಗಮನ ಹರಿಸುತ್ತೇವೆ. ಪಕ್ಷದ ಮುಖಂಡರು, ಕಾರ್ಯಕರ್ತರ ಪರಿಶ್ರಮದಿಂದಾಗಿ ಬಿಜೆಪಿ ಈ ಚುನಾವಣೆಯಲ್ಲಿ ಮುನ್ನಡೆ ಸಾಧಿಸಲು ಸಾಧ್ಯವಾಗಿದೆ. ರಾಜ್ಯ ಪ್ರವಾಸದ ವೇಳೆ ಮತದಾರರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು.