ನಾವು ಬೊಮ್ಮಾಯಿ ಬಳಿ ಕೇಳಿ ಹೋರಾಟ ಮಾಡಬೇಕಾ: ಸಿದ್ದರಾಮಯ್ಯ ಪ್ರಶ್ನೆ
ಬೆಳಗಾವಿ: 'ವಿರೋಧ ಪಕ್ಷದವರು ಬೇಕಾದರೆ ಕಲಾಪದಲ್ಲಿ ಬಂದು ಮಾತನಾಡಲಿ 'ಎಂದು ಹೇಳಿಕೆ ನೀಡಿದ್ದ ಸಿಎಂ ಬೊಮ್ಮಾಯಿಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ನಾವು ಮುಖ್ಯಮಂತ್ರಿ ಬಳಿ ಕೇಳಿ ಹೋರಾಟ ಮಾಡಬೇಕಾ? ಪ್ರತಿಭಟನೆ ಮಾಡುವುದು ನಮ್ಮ ಹಕ್ಕು ಎಂದು ಹೇಳಿದ್ದಾರೆ.
ಸುವರ್ಣ ಸೌಧಕ್ಕೆ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನಾ ರ್‍ಯಾಲಿಯಲ್ಲಿ ಪಾಲ್ಗೊಂಡಿರುವ ಸಿದ್ದರಾಮಯ್ಯ ಸುದ್ದಿಗಾರರ ಜೊತೆ ಮಾತನಾಡಿದರು.
ಕೋವಿಡ್ ನಿಂದ ಮೃತಪಟ್ಟವರಿಗೆ ಪರಿಹಾರ ನೀಡಿಲ್ಲ, ಮಳೆ ಹಾನಿಯೊಳಗಾದ ರೈತರಿಗೆ ಪರಿಹಾರ ನೀಡಿಲ್ಲ. ಬೆಲೆ ಏರಿಕೆ ಸೇರಿದಂತೆ ಹಲವು ವಿಚಾರಗಳನ್ನು ಸದನದಲ್ಲಿ ಪ್ರಸ್ತಾಪ ಮಾಡುತ್ತೇವೆ ಎಂದು ತಿಳಿಸಿದರು.
ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನಾ ರ್‍ಯಾಲಿ
ರಾಜ್ಯ ಬಿಜೆಪಿ ಸರಕಾರದ ವಿರುದ್ಧದ 40 ಪರ್ಸೆಂಟ್ ಕಮಿಷನ್ ಆರೋಪ, ಭ್ರಷ್ಟಾಚಾರ, ನೆರೆ ಪರಿಹಾರದಲ್ಲಿ ತಾರತಮ್ಯ, ಕೋವಿಡ್ ಪರಿಸ್ಥಿತಿ ಎದುರಿಸವಲ್ಲಿ ವಿಫಲ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ಕಾಂಗ್ರೆಸ್ ಬೆಳಗಾವಿ ನಗರದಿಂದ ಸುವರ್ಣ ವಿಧಾನಸೌಧದವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯನ್ನು ಹಮ್ಮಿಕೊಂಡಿತ್ತು.
ಗುರುವಾರ ನಗರದ ರಾಣಿ ಚನ್ನಮ್ಮ ವೃತ್ತದಲ್ಲಿರುವ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಿಂದ ಹೊರಟ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಶಾಸಕರಾದ ಆರ್.ವಿ.ದೇಶಪಾಂಡೆ, ಕೆ.ಆರ್.ರಮೇಶ್ ಕುಮಾರ್, ಎಚ್.ಕೆ.ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್, ರಿಝ್ವಾನ್ ಅರ್ಶದ್, ತನ್ವೀರ್ ಸೇಠ್, ಕೃಷ್ಣಬೈರೇಗೌಡ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಡಾ.ಬಿ.ಪುಷ್ಪಾ ಅಮರನಾಥ್ ಸೇರಿದಂತೆ ಶಾಸಕರು, ಮುಖಂಡರು ಪಾಲ್ಗೊಂಡಿದ್ದರು.