ಮುಂದಿನ ಆದೇಶದವರೆಗೂ ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯಕ್ಕೆ ಬಲವಂತ ಬೇಡ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು, ಡಿ.16: ರಾಜ್ಯದ ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಿ ಹೊರಡಿಸಿರುವ ಆದೇಶದ ಕುರಿತಂತೆ ಕೇಂದ್ರ ಸರಕಾರ ನಿಲುವು ಸ್ಪಷ್ಟಪಡಿಸುವವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.
ರಾಜ್ಯದ ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಿರುವ ಸರಕಾರದ ಆದೇಶ ಪ್ರಶ್ನಿಸಿ ಸಂಸ್ಕೃತಿ ಭಾರತ ಟ್ರಸ್ಟ್ ಹಾಗೂ ಮಹಾವಿದ್ಯಾಲಯ ಸಂಸ್ಕೃತ ಪ್ರಾಧ್ಯಾಪಕರ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ, ಕೇಂದ್ರ ಸರಕಾರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂ.ಬಿ.ನರಗುಂದ, ಭಾಷೆ ಗಂಭೀರ ಪರಿಣಾಮ ಬೀರುವಂತಹ ವಿಷಯ. ಈ ಕುರಿತು ಕೇಂದ್ರ ಸರಕಾರ ಎಲ್ಲ ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಬೇಕಾಗಿದೆ. ಈ ಕುರಿತು ಕೇಂದ್ರ ಸರಕಾರ ಸಮಾಲೋಚನೆ ನಡೆಸಿದ ಕೂಡಲೇ ನಿಲುವು ಸ್ಪಷ್ಟಪಡಿಸಲಾಗುವುದು. ಅದಕ್ಕೆ ಒಂದಷ್ಟು ಕಾಲಾವಕಾಶ ನೀಡಬೇಕು ಎಂದು ಕೋರಿದರು.
ರಾಜ್ಯ ಸರಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು, ರಾಜ್ಯದ ಪದವಿ ಕಾಲೇಜುಗಳಲ್ಲಿ 4 ಲಕ್ಷ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಅವರೆಲ್ಲರೂ ಕನ್ನಡ ವ್ಯಾಸಂಗ ಮಾಡುತ್ತಿದ್ದಾರೆ.ಹೀಗಾಗಿ, ಭಾಷೆ ಕಲಿಕೆಗೆ ಅಡ್ಡಿಯಾಗುವಂತೆ ಯಾವುದೇ ಮಧ್ಯಂತರ ಆದೇಶ ನೀಡಬಾರದು ಎಂದು ಕೋರಿದರು.
ವಕೀಲರ ವಾದ ಆಲಿಸಿದ ನ್ಯಾಯಪೀಠ, ರಾಜ್ಯದ ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಬಾರದು. ಕನ್ನಡ ಕಲಿತ ವಿದ್ಯಾರ್ಥಿಗಳು ಕಲಿಯಲು ಅಡ್ಡಿಯಿಲ್ಲ. ಆದರೆ, ಕನ್ನಡ ಕಲಿಯಲು ಬಯಸದೇ ಇರುವ ವಿದ್ಯಾರ್ಥಿಗಳಿಗೆ ಮುಂದಿನ ಆದೇಶದವರೆಗೂ ಕಡ್ಡಾಯಗೊಳಿಸುವುದಾಗಲಿ, ಬಲವಂತ ಮಾಡುವುದಾಗಲಿ ಬೇಡ ಎಂದು ರಾಜ್ಯ ಸರಕಾರಕ್ಕೆ ಸೂಚಿಸಿ, ವಿಚಾರಣೆ ಮುಂದೂಡಿತು.